ಸರ್ಕಾರದ ವಿರುದ್ಧ ಎಬಿವಿಪಿ ಕಾರ್ಯಕರ್ತರ ಆಕ್ರೋಶ

KannadaprabhaNewsNetwork |  
Published : Oct 28, 2023, 01:15 AM IST
೨೭ಕೆಎಂಎನ್‌ಡಿ-೩ವಿದ್ಯಾರ್ಥಿವೇತನ ನೀಡದೆ ವಂಚಿಸುತ್ತಿರುವ ರಾಜ್ಯಸರ್ಕಾರದ ಧೋರಣೆಯನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಮಂಡ್ಯದ ಸಕರ್ಕಾರಿ ಮಹಿಳಾ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಂಡ್ಯ: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಸರ್ಕಾರಿ ಮಹಿಳಾ ಕಾಲೇಜಿನ ಬಳಿ ಸೇರಿದ ಎಬಿವಿಪಿ ಕಾರ್ಯಕರ್ತರು, ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಉನ್ನತ ಶಿಕ್ಷಣದ ಆಸೆ ಇಟ್ಟುಕೊಂಡು ಹಲವಾರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಸರ್ಕಾರ ನಮ್ಮ ನೆರವಿಗೆ ಧಾವಿಸುತ್ತದೆ. ಆರ್ಥಿಕ ಬೆಂಬಲವನ್ನು ವಿದ್ಯಾರ್ಥಿ ವೇತನದ ರೂಪದಲ್ಲಿ ನೀಡುತ್ತದೆ ಎಂದು ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ, ರಾಜ್ಯ ಸರ್ಕಾರ ಶಿಕ್ಷಣಕ್ಕೆ ನೀಡಬೇಕಾದ ಪ್ರಾಮುಖ್ಯತೆಯನ್ನು ನೀಡದೆ ಇರುವುದು ವಿದ್ಯಾರ್ಥಿ ವೇತನದಲ್ಲೂ ರಾಜಕೀಯವನ್ನು ಮುಂದುವರಿಸುತ್ತಿರುವುದು ಬಡ ವಿದ್ಯಾರ್ಥಿಗಳ ಶೋಚನೀಯ ಸ್ಥಿತಿಗೆ ಕಾರಣವಾಗಿದೆ ಎಂದು ದೂರಿದರು. ವಿವಿಧ ಇಲಾಖೆಗಳ ಅಡಿಯಲ್ಲಿ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ತಮ್ಮ ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿ ವೇತನವನ್ನು ನೀಡದೆ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣವನ್ನು ಅತಂತ್ರ ಸ್ಥಿತಿಗೆ ತರುವ ಕೆಲಸ ಮಾಡಿದೆ. ರೈತ ಮಕ್ಕಳ ಶಿಕ್ಷಣಕ್ಕಾಗಿ ಹಿಂದಿನ ಸರ್ಕಾರ ರೈತ ವಿದ್ಯಾನಿಧಿಯನ್ನು ಪ್ರಾರಂಭಿಸಿತ್ತು. ಈ ವಿದ್ಯಾರ್ಥಿ ವೇತನವನ್ನು ಈಗಿನ ರಾಜ್ಯ ಸರ್ಕಾರ ತಡೆಹಿಡಿದಿದೆ ಎಂದು ಆರೋಪಿಸಿದರು. ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿದ್ದಾರೆ. ಇದನ್ನು ಹೋಗಲಾಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯ ಸರ್ಕಾರ ೨೦೨೨-೨೩ನೇ ಸಾಲಿನಲ್ಲಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿ ವೇತನ ತಡೆಹಿಡಿದು ಆ ಹಣವನ್ನು ಇನ್ನಿತರ ಕಾರ‌್ಯಗಳಿಗಾಗಿ ಬಳಸುತ್ತಿರುವ ಕ್ರಮವನ್ನು ಖಂಡಿಸಿದರು. ತಕ್ಷಣವೇ ಬಡ ವಿದ್ಯಾರ್ಥಿಗಳ ಶಿಕ್ಷಣದ ಹಿತದೃಷ್ಠಿಯಿಂದ ತಡೆಹಿಡಿದಿರುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿ ಮುಖಂಡರಾದ ಚಂದು, ಶ್ರೇಯಸ್, ಜಿ.ಸುಗುಣ, ನಿತಮ್ ಸೇರಿದಂತೆ ಹಲವಾರು ಮಂದಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ