ನಗರದ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಹೆಲಿರೈಡ್ ಕಾರ್ಯುಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹೆಲಿಕಾಪ್ಟರ್ ಹಾರಾಟದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ
ಕನ್ನಡಪ್ರಭ ವಾರ್ತೆ ತುಮಕೂರು
ನಗರದ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಹೆಲಿರೈಡ್ ಕಾರ್ಯುಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹೆಲಿಕಾಪ್ಟರ್ ಹಾರಾಟದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಹೆಲಿರೈಡ್ ವ್ಯವಸ್ಥೆಯನ್ನು ತಕ್ಷಣ ಬೇರೆ ಸ್ಥಳಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಪ್ರತಿಭಟನೆ ವೇಳೆ ಹೆಲಿಕಾಪ್ಟರ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ತುಮಕೂರು ದಸರಾ ಉತ್ಸವದ ಅಂಗವಾಗಿ ಜಿಲ್ಲಾಡಳಿತವು ವಿಶ್ವವಿದ್ಯಾಲಯದ ಆವರಣದಲ್ಲಿ ಹೆಲಿರೈಡ್ ಕಾರ್ಯಮವನ್ನು ಆಯೋಜಿಸಿದೆ. ಆದರೆ, ಸತತ 12 ದಿನಗಳ ಕಾಲ ಪ್ರತಿ 10 ನಿಮಿಷಕ್ಕೊಮ್ಮೆ ಹೆಲಿಕಾಪ್ಟರ್ ಹಾರಾಟ ನಡೆಸುವುದರಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಓದು ಹಾಗೂ ಬೋಧನಾ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂಬುದು ವಿದ್ಯಾರ್ಥಿಗಳ ಪ್ರಮುಖ ಆರೋಪವಾಗಿದೆ. ಹೆಲಿಕಾಪ್ಟರ್ ಹಾರಾಟದ ವೇಳೆ ಉಂಟಾಗುವ ಕರ್ಕಶ ಶಬ್ದದಿಂದ ತರಗತಿಗಳಲ್ಲಿ ಪಾಠ ಕೇಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಹೆಲಿಕಾಪ್ಟರ್‌ನಿಂದ ಉಂಟಾಗುವ ಧೂಳು ತರಗತಿ ಕೊಠಡಿಗಳ ಒಳಗೆ ಸೇರುತ್ತಿದ್ದು, ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಮಸ್ಯೆಯನ್ನು ಜಿಲ್ಲಾಡಳಿತದ ಗಮನಕ್ಕೆ ತರುವ ಉದ್ದೇಶದಿಂದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರ ಸಂಘ ಹಾಗೂ ಎಬಿವಿಪಿ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಹೆಲಿರೈಡ್ ಕಾರ್ಯಕ್ರಮವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಮನವಿ ಸಲ್ಲಿಸಿತ್ತು. ಆದರೆ, ಮನವಿಗೆ ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಿಲ್ಲ ಎಂದು ಎಬಿವಿಪಿ ಮುಖಂಡರು ಆರೋಪಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಿಂತ ಮನರಂಜನಾ ಕಾರ್ಯೂಕ್ರಮಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂಬ ಆಕ್ರೋಶವೂ ಪ್ರತಿಭಟನೆಯಲ್ಲಿ ವ್ಯಕ್ತವಾಯಿತು.
ಪ್ರತಿಭಟನೆಗೆ ಎಬಿವಿಪಿ ಜಿಲ್ಲಾ ಸಂಚಾಲಕ್ ಎಚ್.ಆರ್. ಗುರುಪ್ರಸಾದ್ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂಘದ ಪ್ರತಿನಿಧಿಗಳೊಂದಿಗೆ ಜಿಲ್ಲಾಡಳಿತಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿತ್ತು. ಆದರೂ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು. ಸಮಸ್ಯೆಯನ್ನು ಆಲಿಸಿ ಪರಿಹಾರ ಕಲ್ಪಿಸಬೇಕಾದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸದಿರುವುದು ಖಂಡನೀಯ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸದ ಜಿಲ್ಲಾಡಳಿತದ ಧೋರಣೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಬಿವಿಪಿ ರಾಜ್ಯ ಕಾರ್ಯದದರ್ಶಿ ಗೋಪಿ ಮಾತನಾಡಿ, ಜಿಲ್ಲಾಡಳಿತವು ತಕ್ಷಣವೇ ಹೆಲಿರೈಡ್ ಕಾರ್ಯಕ್ರಮವನ್ನು ಸ್ಥಳಾಂತರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಪ್ರತಿಭಟನಾ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಸಮನ್ವಿತ್, ಜಿಲ್ಲಾ ಸಂಚಾಲಕ ಎಚ್.ಆರ್. ಗುರುಪ್ರಸಾದ್, ರಾಜ್ಯ ಕಾರ್ಯದರ್ಶಿ ಗೋಪಿ, ಜಿಲ್ಲಾ ಸಂಚಾಲಕ ಸಿದ್ದರಾಮಯ್ಯ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.