ಶೈಕ್ಷಣಿಕ ಬೇಡಿಕೆಗಳಿಗೆ ಅಗ್ರಹಿಸಿ ಎಬಿವಿಪಿ ಪ್ರತಿಭಟನೆ

KannadaprabhaNewsNetwork | Published : Jul 13, 2024 1:32 AM

ಸಾರಾಂಶ

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ಕಚೇರಿಗೆ ಮುತ್ತಿಗೆ ಹಾಕಿ ಕಾರ್ಯಕರ್ತರಿಂದ ಹೋರಾಟ. ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ನೀಡದೆ ಇರುವುದು, ಸಾರಿಗೆ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ವಿದ್ಯಾರ್ಥಿಗಳು ದಿನನಿತ್ಯ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳಾದ ಹಾಸ್ಟೆಲ್, ಬಸ್ಸಿನ ಸಮಸ್ಯೆ, ವಿಶ್ವವಿದ್ಯಾಲಯಗಳ ಏಕರೂಪ ವೇಳಾಪಟ್ಟಿ ಹಾಗೂ ವಿದ್ಯಾರ್ಥಿ ವೇತನ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ಕಚೇರಿಗೆ ಮುತ್ತಿಗೆ ಹಾಕಿ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ಮಾಡಿದರು.

ಈ ಸಂದರ್ಭದಲ್ಲಿ ಎಬಿವಿಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಹನುಮಂತ ಬಗಲಿ ಮಾತನಾಡಿ, ಎಲ್ಲ ಕ್ಷೇತ್ರಗಳಿಗೂ ಉತ್ತಮವಾದ, ವಿದ್ಯಾವಂತ, ಕೌಶಲ್ಯವುಳ್ಳ, ಹಾಗೂ ಪ್ರಾಮಾಣಿಕ ವ್ಯಕ್ತಿಗಳನ್ನು ನೀಡುವ ಕ್ಷೇತ್ರ ಶಿಕ್ಷಣ ಕ್ಷೇತ್ರ, ಮುಂದಿನ ಹತ್ತಾರು ವರ್ಷದ ರಾಜ್ಯ ಮತ್ತು ದೇಶದ ಅಭಿವೃದ್ಧಿ ಶಿಕ್ಷಣ ಕ್ಷೇತ್ರದ ಮೇಲೆ ನಿಂತಿರುತ್ತದೆ.

ಆ ಕ್ಷೇತ್ರಕ್ಕೆ ಎಲ್ಲ ಸೌಲಭ್ಯವನ್ನು ಕೊಡುವುದು ಸರ್ಕಾರಗಳ ಮೊದಲ ಆದ್ಯತೆಯಾಗಬೇಕು. ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ನೀಡದೆ ಇರುವುದು, ಸಾರಿಗೆ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ವಿದ್ಯಾರ್ಥಿಗಳು ದಿನನಿತ್ಯ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಕಳೆದ ವರ್ಷದ ವಿದ್ಯಾರ್ಥಿ ವೇತನವು ವಿದ್ಯಾರ್ಥಿಗಳಿಗೆ ಸರಿಯಾಗಿ ಜಮೆಯಾಗದೆ ಇರುವುದು, ಶಾಲಾ ಕಾಲೇಜುಗಳು ಪ್ರಾರಂಭವಾದ ತಿಂಗಳ ನಂತರ ಹಾಸ್ಟೆಲ್‌ಗಳ ಅರ್ಜಿಯನ್ನು ಪ್ರಾರಂಭ ಮಾಡಿ, ಪ್ರವೇಶಾತಿ ಪ್ರಕ್ರಿಯೆ ಮುಗಿಯುವುದರೊಳಗೆ ಮೂರು ತಿಂಗಳುಗಳ ಕಾಲ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಿಗದಿರುವುದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳ ಸಂಖ್ಯೆ ಇರದಿರುವುದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಹಳಷ್ಟು ಬದಲಾವಣೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸಚಿವರಾದ ನೀವು ಈ ಬಗ್ಗೆ ಗಮನಹರಿಸಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಎಬಿವಿಪಿ ಆಗ್ರಹಿಸಿತು.

ವೇಳೆ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ,ಈ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಭಾಗ್ಯಶ್ರೀ ಬೆಳೆ ನಿತೀಶ್ ಕುಮಾರ್ ದಿಲೀಪ್ ಆದಿತ್ಯ ಅಕ್ಷತಾ ಶ್ರಾವಣ ಶಿವರಾಜ ನಗರ ಕಾರ್ಯದರ್ಶಿ ಶಾಂತಕುಮಾರ್, ಕುಮಾರಿ ಅರುಣಾ, ರಕ್ಷಿತಾ, ತರುಣ್, ದಿಲೀಪ್ ಶರಣ, ಮುತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳು:

೧) ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಗಳ ಸಂಖ್ಯೆ ಹೆಚ್ಚಳ ಮಾಡಬೇಕು.

೨) ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪ್ರವೇಶಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಪ್ರವೇಶಾತಿ ನೀಡುವಂತಾಗಬೇಕು.

೩) ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು.

೪) ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕು.

೫) ರಾಜ್ಯದ ಎಲ್ಲ ವಿವಿಗಳಿಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಸಮರ್ಪಕವಾಗಿ ಜಾರಿ ಮಾಡುವಂತೆ ಸೂಚಿಸಬೇಕು.

೬) ಬಸ್ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ಸಿಗುವಂತಾಗಬೇಕು.

೭)ಹಾಸ್ಟೆಲ್‌ಗಳ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು ಹಾಗೂ ಹಾಸ್ಟೆಲ್‌ಗಳಿಗೆ ಸ್ವಂತ ಕಟ್ಟಡ ನೀಡಬೇಕು.

೮) ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ಎಸ್‌ಸಿಪಿ ಮತ್ತು ಟಿಸ್‌ಪಿ ಅನುದಾನವನ್ನ ಬೇರೆ ಕಡೆ ಬಳಕೆ ಮಾಡಿರುವ ಕುರಿತು ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಅಗ್ರಹಿಸಿದರು.

Share this article