ಮುಖ್ಯರಸ್ತೆ ಕಾಮಗಾರಿಗೆ ವೇಗ ನೀಡಿ, ಗುಣಮಟ್ಟದಲ್ಲಿ ರಾಜಿ ಇಲ್ಲ: ಜಿಲ್ಲಾಧಿಕಾರಿ ಖಡಕ್ ಸೂಚನೆ

KannadaprabhaNewsNetwork |  
Published : Nov 07, 2026, 03:00 AM IST
ಬ್ಯಾಡಗಿ ಪಟ್ಟಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮ ನವರ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಅಗಲೀಕರಣ ಹಾಗೂ ಚರಂಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. | Kannada Prabha

ಸಾರಾಂಶ

ಮುಖ್ಯರಸ್ತೆ ಕಾಮಗಾರಿಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದರ ಜೊತೆಗೆ ಕಾಮಗಾರಿಗೆ ವೇಗ ನೀಡಬೇಕು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಬ್ಯಾಡಗಿ: ಮುಖ್ಯರಸ್ತೆ ಕಾಮಗಾರಿಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದರ ಜೊತೆಗೆ ಕಾಮಗಾರಿಗೆ ವೇಗ ನೀಡಬೇಕು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಶುಕ್ರವಾರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಅಗಲೀಕರಣ ಹಾಗೂ ಚರಂಡಿ ಕಾಮಗಾರಿಗಳ ಪ್ರಗತಿಯನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ನಂತರ ಅಧಿಕಾರಿಗಳೊಂದಿಗೆ ಮಾತನಾಡಿದರು. ಈಗಾಗಲೇ ಕಾಮಗಾರಿಗೆ ಸಾಕಷ್ಟು ಸಮಯ ಕಳೆದಿದೆ, ಹೀಗಾಗಿ ಮತ್ತಷ್ಟು ವಿಳಂಬಕ್ಕೆ ಅವಕಾಶ ನೀಡದೆ ಕಾಮಗಾರಿಯನ್ನು ತ್ವರಿತ ವಾಗಿ ಪೂರ್ಣಗೊಳಿಸಬೇಕು,ಕಾಮಗಾರಿ ನಡೆಸುವ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಯಾವುದೇ ಹಂತದಲ್ಲಿಯೂ ಕಳಪೆ ಗುಣಮಟ್ಟದ ಕೆಲಸಕ್ಕೆ ಅವಕಾಶ ನೀಡಬಾರದು, ನಿಗದಿತ ಮಾನದಂಡಗಳಂತೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು.

ಗುತ್ತಿಗೆದಾರನ ತರಾಟೆ: ಪಟ್ಟಣದ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿಯಲ್ಲಿ ಗಂಭೀರ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುತ್ತಿಗೆದಾರನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದರೂ ಕಾಮಗಾರಿಯಲ್ಲಿ ಇಂತಹ ತಪ್ಪುಗಳು ಕಂಡುಬರುತ್ತಿರುವುದು ಸರಿಯಲ್ಲ. ಕೂಡಲೇ ಆಗಿರುವ ಲೋಪಗಳನ್ನು ಸರಿಪಡಿಸಿ, ಅನುಮೋದಿತ ಡಿಪಿಆರ್ ಪ್ರಕಾರವೇ ಕಾಮಗಾರಿ ಕೈಗೊಳ್ಳಬೇಕು. ಕಾಮಗಾರಿಯ ಗುಣಮಟ್ಟ ಹಾಗೂ ವಿನ್ಯಾಸದ ವಿಚಾರದಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ ಎಂದು ಖಡಕ್ ಸೂಚನೆ ನೀಡಿದರು.

ಅವಕಾಶ ನೀಡಿದರೂ ಕಟ್ಟಡ ತೆರವುಗೊಳಿಸಿಲ್ಲ: ಮುಖ್ಯರಸ್ತೆಯಲ್ಲಿನ ಕಟ್ಟಡ ತೆರವು ಕಾರ್ಯಾಚರಣೆ ಕಳೆದ ಮೇ ತಿಂಗಳಲ್ಲಿಯೇ ನಡೆದಿದ್ದು, ಬಳಿಕ ಕೆಲವು ಕಟ್ಟಡ ಮಾಲೀಕರಿಗೆ ತಮ್ಮ ಕಟ್ಟಡಗಳನ್ನು ತೆರವುಗೊಳಿಸಿಕೊಳ್ಳಲು ಹಲವು ಬಾರಿ ಅವಕಾಶ ನೀಡಲಾಗಿದೆ, ಆದರೂ ಇನ್ನೂ ಕಟ್ಟಡ ತೆರವುಗೊಳಿಸದಿರುವುದಕ್ಕೆ ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಕಟ್ಟಡ ಮಾಲೀಕರೊಬ್ಬರಿಗೆ ದೂರವಾಣಿ ಮೂಲಕ ಕರೆ ಮಾಡಿ, ಈಗಾಗಲೇ ಹಲವು ಬಾರಿ ಅವ ಕಾಶ ನೀಡಿದ್ದರೂ ಕಟ್ಟಡ ತೆರವುಗೊಳಿಸದಿರುವುದು ಸರಿಯಲ್ಲ, ಕೂಡಲೇ ಕಟ್ಟಡ ತೆರವುಗೊಳಿಸಿಕೊಳ್ಳಬೇಕು. ಶಿಥಿಲಗೊಂಡ ಕಟ್ಟಡ ಕುಸಿದು ಯಾವುದೇ ಅನಾಹುತ ಸಂಭವಿಸಿದರೆ ಅದಕ್ಕೆ ನೀವೇ ಹೊಣೆಗಾರರಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು.

ಅಳತೆಯಲ್ಲಿ ತಾರತಮ್ಯಕ್ಕೆ ಅವಕಾಶವಿಲ್ಲ: ಮುಖ್ಯರಸ್ತೆ ಕಾಮಗಾರಿಯಲ್ಲಿ ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಇನ್ನೊಂದು ಒಂದು ಅಳತೆ, ಮತ್ತೊಬ್ಬರಿಗೆ ಮತ್ತೊಂದು ಅಳತೆಯಂತೆ ಕಾಮಗಾರಿ ನಡೆಸಲಾಗುತ್ತಿದೆ ಎಂಬ ದೂರುಗಳು ಬಂದಿವೆ, ಇಂತಹ ತಾರತಮ್ಯ ನಿಜವೆಂದು ಕಂಡುಬಂದಲ್ಲಿ ಸಂಬಂಧಿಸಿದವರು ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಎಲ್ಲರಿಗೂ ಒಂದೇ ಮಾನದಂಡ ಅನ್ವಯವಾಗಬೇಕು. ರಸ್ತೆ ಅಗಲೀಕರಣದ ಅಳತೆ ಹಾಗೂ ಕಾಮಗಾರಿ ನಿರ್ವಹಣೆಯಲ್ಲಿ ಯಾವು ದೇ ರೀತಿಯ ವ್ಯತ್ಯಾಸ ಅಥವಾ ರಾಜಿ ಇರಬಾರದು, ನಿಗದಿತ ಅಳತೆಯಂತೆ ಮಾತ್ರ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಇಲಾಖೆಗಳ ನಡುವೆ ಸಮನ್ವಯತೆ ಇರಲಿ: ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಯು ಲೋಕೋಪಯೋಗಿ ಇಲಾಖೆ, ಪುರಸಭೆ, ಎಪಿಎಂಸಿ ಹಾಗೂ ಪೊಲೀಸ್ ಇಲಾಖೆಗಳ ಸಮನ್ವಯದಲ್ಲಿ ನಡೆಯಬೇಕಿದೆ. ಆದರೆ ವಿವಿಧ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇದಕ್ಕೆ ಅವಕಾಶ ನೀಡದೆ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕಾಮಗಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಿ, ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ಅಭಿವೃದ್ಧಿ ಕರ‍್ಯಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳಿಯಪ್ಪಗೋಳ, ಎಇಇ ಆಂಜನೇಯ, ಅಶೋಕ ಜೈನ್, ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಛಲವಾದಿ, ಶಿವು ಕಲ್ಲಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ