ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಸಂತ ಜೋಸೆಫರ ಕಾನ್ವೆಂಟ್ ಬಾಲಕಿಯರ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೈಹಿಕ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವಂತೆ ಮಾನಸಿಕ ಕಾಯಿಲೆಗಳಿಗೂ ಚಿಕಿತ್ಸೆ ಪಡೆಯಬೇಕು. ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಮುಚ್ಚಿಡದೆ ಕುಟುಂಬದ ಸದಸ್ಯರು, ಆತ್ಮೀಯರು ಹಾಗೂ ವೈದ್ಯರೊಂದಿಗೆ ಹಂಚಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಜನರಲ್ಲಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕು. ಆತ್ಮಹತ್ಯೆಯ ಆಲೋಚನೆ, ತೀವ್ರ ಮಾನಸಿಕ ಒತ್ತಡ ಅಥವಾ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಮೀಪದ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗೆ ಭೇಟಿ ನೀಡಬೇಕು. ಅಲ್ಲದೆ, ಟೆಲಿ-ಮಾನಸ್ 14416 ಸಹಾಯವಾಣಿಯ ಮೂಲಕ ಮಾನಸಿಕ ಆರೋಗ್ಯ ಸೇವೆ ಪಡೆಯಬಹುದು ಎಂದರು.
ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಮತ್ತು ಶಿಸ್ತುಬದ್ಧ ಜೀವನ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ. ಮಾನಸಿಕ ನೆಮ್ಮದಿಗೆ ವ್ಯಕ್ತಿಯ ಮನೋಭಾವವೂ ಮುಖ್ಯವಾಗಿದ್ದು, ಜೀವನದಲ್ಲಿ ಸಮತೋಲನ ಕಾಯ್ದುಕೊಳ್ಳಬೇಕು. ಜಗತ್ತಿನಲ್ಲಿರುವ 950 ಕೋಟಿ ಜನರಲ್ಲಿ 100 ಕೋಟಿ ಜನರು ಮಾನಸಿಕ ರೋಗಿಗಳು ಇದ್ದಾರೆ ಎಂದು ಮಾಹಿತಿ ಇರುವುದಾಗಿ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಪರೀಕ್ಷೆ ಸೇರಿದಂತೆ ಜೀವನದ ವಿವಿಧ ಹಂತಗಳಲ್ಲಿ ಒತ್ತಡ ಎದುರಾಗುವುದು ಸಹಜ. ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದೆ ನಿರಂತರ ಅಭ್ಯಾಸ ಮತ್ತು ಪ್ರಯತ್ನಕ್ಕೆ ಆದ್ಯತೆ ನೀಡಬೇಕು. ಜೀವನದ ಯಾವುದೇ ಒಂದು ಕ್ಷಣ ಅಥವಾ ಪರೀಕ್ಷೆಯನ್ನು ಅಂತಿಮ ನಿರ್ಣಾಯಕ ಹಂತವೆಂದು ಭಾವಿಸಬಾರದು. ಸಮಸ್ಯೆಗಳನ್ನು ಧೈರ್ಯದಿಂದ ಸಂಬಂಧಪಟ್ಟವರೊಂದಿಗೆ ಹಂಚಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವಿ.ಕಾಂತರಾಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರೇಮ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಸಿ.ಚೇತನ್, ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಅರುಳ್ ಅಮುದ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಶಿವಕುಮಾರ್, ಮನೋವೈದ್ಯರಾದ ಡಾ.ಜಿ.ಹೇಮಂತ್ ಕುಮಾರ್, ಡಾ.ಎ.ಲಾವಣ್ಯ, ಡಾ.ಜಿ.ಎಸ್.ಹರ್ಷಿತ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.