ರಾಮನಗರ: ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಮಾ. 28 ರಿಂದ ಏಪ್ರಿಲ್ 4 ರವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ 205ರಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.
ಪ್ರತಿದಿನ ಸ್ವೀಕರಿಸುವ ನಾಮಪತ್ರಗಳ ವಿವರಗಳನ್ನು ಅದೇ ದಿನ ಮಧ್ಯಾಹ್ನ 3 ಗಂಟೆಯ ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ನಾಮಫಲಕದಲ್ಲಿ ಅಳವಡಿಸಲಾಗುವುದು ಹಾಗೂ ಚುನಾವಣಾ ಆಯೋಗದ ವೆಬ್‌ಸೈಟಿನಲ್ಲಿಯೂ ಸಹ ಪ್ರಕಟಿಸಲಾಗುವುದು ಎಂದು ಹೇಳಿದರು.
ನಾಮಪತ್ರ ಸ್ವೀಕೃತಿ ಕೇಂದ್ರದ 100 ಮೀಟರ್ ಸುತ್ತಳತೆ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದ್ದು, ನಾಮಪತ್ರ ಸಲ್ಲಿಕೆ ವೇಳೆ ನಿಷೇಧಿತ ಪ್ರದೇಶಕ್ಕೆ ಮೂರು ವಾಹನ ಗಳಿಗೆ ಮಾತ್ರ ಪ್ರವೇಶಿಸಲು ಅವಕಾಶ ಇರಲಿದೆ. ನಾಮಪತ್ರ ಸ್ವೀಕೃತಿ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡಿಂಗ್ ಮಾಡಲಾಗುವುದು, ನಾಮಪತ್ರ ಸಲ್ಲಿಸಲು ಅವಶ್ಯ ಇರುವ ದಾಖಲೆ ಮತ್ತು ಅನುಸರಿಸಬೇಕಾದ ಪ್ರಕ್ರಿಯೆ ಕುರಿತು ಚುನಾವಣಾ ಅಧಿಕಾರಿಗಳ ಕಾರ್ಯಾಲಯದಲ್ಲಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಅವಿನಾಶ್ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾತನಾಡಿ, ಚುನಾವಣಾಧಿಕಾರಿಗಳ ಕಚೇರಿಯ 100 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಗುರುತಿಸಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಹಾಗೂ ಚುನಾವಣಾಧಿಕಾರಿಗಳ ಕಚೇರಿಯ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದು ತಿಳಿಸಿದರು.
ನಾಮಪತ್ರ ಸಲ್ಲಿಸುವ ಅಭ್ಯರ್ಥಿಯೊಂದಿಗೆ 4 ಜನರ ಪ್ರವೇಶಕ್ಕೆ ಅನುಮತಿಯಿದ್ದು, ಅಭ್ಯರ್ಥಿಗಳೊಂದಿಗೆ ಬರುವವರಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಆಸನದ ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಯು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ರ‍್ಯಾಲಿ ಮಾಡಿದ್ದಲ್ಲಿ ಕಡ್ಡಾಯವಾಗಿ ಸಂಬಂಧಪಟ್ಟ ಎಆರ್‌ಒಗಳಿಂದ ಅನುಮತಿ ಪಡೆದಿರಬೇಕು ಎಂದು ಹೇಳಿದರು.27ಕೆಆರ್ ಎಂಎನ್ 5.ಜೆಪಿಜಿ
ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.