ಹಾವೇರಿ: ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿಯಲ್ಲಿ(ಎಸ್‌ಸಿಎಸ್‌ಪಿ- ಟಿಎಸ್‌ಪಿ) ಪ್ರಸಕ್ತ ಸಾಲಿಗೆ ಕ್ರಿಯಾಯೋಜನೆ ತಯಾರಿಸಿ ಕಾಲಮಿತಿ ಯೋಜನೆಗಳ ನಿಗದಿತ ಗುರಿ ಸಾಧನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.ಸ್ಥಳೀಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿಯಲ್ಲಿ(ಎಸ್‌ಸಿಎಸ್‌ಪಿ- ಟಿಎಸ್‌ಪಿ) ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್ ಸ್ಯಾನಿಟರಿ ಲ್ಯಾಟ್ರಿನ್ಸ್ ಮತ್ತು ಸಫಾಯಿ ಕರ್ಮಚಾರಿಗಳ ಕುರಿತಾದ ಜಿಲ್ಲಾ ಮಟ್ಟದ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿಗದಿತ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯಗಳನ್ನು ತಲುಪಿಸಬೇಕು. ಯೋಜನೆಗಳ ಅನುಷ್ಠಾನವನ್ನು ವಿಳಂಬ ಮಾಡಬಾರದು. ಆಯಾ ಸಾಲಿನ ಅನುದಾನವನ್ನು ಆಯಾ ಸಾಲಿನಲ್ಲೆ ವೆಚ್ಚ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಪೌರಕಾರ್ಮಿಕರ ವೇತನ ವಿಳಂಬವಾಗುತ್ತಿದ್ದು, ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಹಾಗಾಗಿ ಪ್ರತಿ ತಿಂಗಳು ವೇತನ ಪಾವತಿಸುವಂತೆ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೌರಕಾರ್ಮಿಕರ ಕುಂದುಕೊರತೆ ಸಭೆ ಆಯೋಜನೆ ಮಾಡುವಂತೆ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಹಾಗೂ ಇನ್ ಸ್ಯಾನಿಟರಿ ಲ್ಯಾಟ್ರಿನ್ಸ್ ಮತ್ತು ಸಫಾಯಿ ಕರ್ಮಚಾರಿಗಳ ಕುರಿತಾದ ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಸುಭಾಸ ಬೆಂಗಳೂರು, ಭೀಮಪ್ಪ ಯಲ್ಲಾಪೂರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಪೌರಕಾರ್ಮಿಕರಿಗೆ ಪ್ರತಿ ಮಾಹೆ ವೇತನ ಪಾವತಿಗೆ ಕ್ರಮ ವಹಿಸುವಂತೆ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, 2024 ಏ. 1ರಿಂದ 2025ರ ಫೆ. 28ರ ವರೆಗೆ ಎಸ್‌ಸಿಎಸ್‌ಪಿ- ಟಿಎಸ್‌ಪಿ ಯೋಜನೆಯಡಿ ಶೇ. 66.68 ರಷ್ಟು ಸಾಧನೆ ಮಾಡಲಾಗಿದೆ. ಅದೇ ರೀತಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿಗೆ ಹಾಗೂ ಪೌರಕಾರ್ಮಿಕರಿಗೆ ಡಾ. ಬಿ.ಆರ್. ಅಂಬೇಡ್ಕರ್, ಪಿಎಂಎವೈ ಹಾಗೂ ಜಿ+1 ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಮನೆ ಹಂಚಿಕೆ ಕ್ರಮವಹಿಸಲಾಗಿದೆ ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.