ನಿಗದಿತ ಕಾಲಮಿತಿಯಲ್ಲಿ ಗುರಿ ಸಾಧಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ

KannadaprabhaNewsNetwork |  
Published : Nov 22, 2025, 02:30 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್‌ ಮಾತನಾಡಿದರು. | Kannada Prabha

ಸಾರಾಂಶ

ಎಸ್‌ಎಸ್‌ಪಿ, ಟಿಎಸ್‌ಪಿ ಯೋಜನೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ, ದುರುಪಯೋಗ ಹಾಗೂ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಳಕೆ ಆಗದೇ ಇರುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿರುತ್ತದೆ.

ಗದಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅನುಷ್ಠಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿಯೇ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್‌ಸಿ, ಎಸ್‌ಟಿ ಕಾಲನಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟದ ಕಡೆಗೂ ನಿಗಾ ವಹಿಸಬೇಕು. ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಠಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು ಎಂದರು.

ಎಸ್‌ಸಿಪಿ, ಟಿಎಸ್‌ಪಿ ಯೋಜನೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ, ದುರುಪಯೋಗ ಹಾಗೂ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಳಕೆ ಆಗದೇ ಇರುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳುವುದು ಅವರ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದಲ್ಲಿ ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಅವಧಿಯೊಳಗೆ ಒದಗಿಸಲು ಕ್ರಮ ವಹಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಅವರು, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ವರದಿಯನ್ನು ವಿವರಿಸಿದರು.

ಈ ವೇಳೆ ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ., ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV

Recommended Stories

ಕೈ ಸರ್ಕಾರಕ್ಕೆ ಎರಡೂವರೆ, ದುರಾಡಳಿತದ ಹೊರೆ : ಗ್ಯಾರಂಟಿ ಬಿಟ್ಟು ಬೇರೇನೂ ಕೊಟ್ಟಿಲ್ಲ
ರಿಯಾಯ್ತಿಯಿಂದ ಸಂಚಾರ ನಿಯಮ ಬಗ್ಗೆ ಪ್ರಯಾಣಿಕರ ಅಸಡ್ಡೆ