ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಉಡುಪಿ: ಪ್ರತಿಯೊಂದು ಮಗುವಿನಲ್ಲೂ ಒಂದಲ್ಲಾ ಒಂದು ರೀತಿಯ ಪ್ರತಿಭೆ ಇರುತ್ತದೆ. ಪೋಷಕರು ಹಾಗೂ
ಗುರು ಹಿರಿಯರು ಮಗುವಿನಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಮಾರ್ಗದರ್ಶನ ನೀಡಿ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಆ ಮಗು ಸಮಾಜದಲ್ಲಿ ಸಾಧನೆ ಮಾಡುವುದಕ್ಕೆ ಸಾಧ್ಯ ಎಂದು ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದ್ದಾರೆ.ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಉಡುಪಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರು, ಮೇಧಾವಿಗಳ ಬಗ್ಗೆ ಬಾಲ್ಯದಿಂದಲೇ ತಿಳಿಸಿದ್ದಲ್ಲಿ ಅವರುಗಳಲ್ಲಿ ದೇಶಪ್ರೇಮದ ಬಗ್ಗೆ ಆಸಕ್ತಿ ಮೂಡುತ್ತದೆ. ಸಮಾಜವನ್ನು ಒಟ್ಟುಗೂಡಿಸುವ, ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡುವ ಶಕ್ತಿ ಮಕ್ಕಳಲ್ಲಿದೆ ಎಂದರು.ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ. ಮಾತನಾಡಿ, ಮ್ಕಕಳಲ್ಲಿರುವ ಪ್ರತಿಭೆಗಳ ಮೂಲಕ ಸಾಧನೆ ಮಾಡಿ, ಕಲೆ, ಸಂಸ್ಕೃತಿ, ಸಂಪ್ರದಾಯ ಉಳಿಸುವುದರೊಂದಿಗೆ ಸಾಂಸ್ಕೃತಿಕ ರಾಯಭಾರಿಗಳಾಗಿ ಹೊರಹೊಮ್ಮಬೇಕು ಎಂದರು.ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ೫-೧೮ ವರ್ಷದ ೮ ಮಕ್ಕಳನ್ನು ಸನ್ಮಾನಿಸಲಾಯಿತು.
ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ ಮತ್ತು ಏಕಪಾತ್ರಾಭಿನಯ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಸೃಜನಾತ್ಮಕ ಕಲೆ - ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ ಹಾಗೂ ಸೃಜನಾತ್ಮಕ ಬರವಣಿಗೆ - ಕಥೆ, ಪ್ರಬಂಧ, ಕವನ ಬರೆಯುವ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಜಯ ನಾರಾಯಣ ನಾಯಕ್, ವಿದ್ಯಾರ್ಥಿಗಳು, ಪೋಷಕರು ಮತ್ತಿತರರು ಇದ್ದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಸ್ವಾಗತಿಸಿದರು. ದೀಪಾ ನಿರೂಪಿಸಿ, ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.