ಕನ್ನಡಪ್ರಭ ವಾರ್ತೆ ಹಾಸನ
ಕ್ರೀಡೆಯೆಂದರೆ ಕೇವಲ ಗೆಲುವು- ಸೋಲಿನ ವಿಚಾರವಲ್ಲ. ಶಿಸ್ತು, ಆತ್ಮವಿಶ್ವಾಸ, ನಿರಂತರ ಅಭ್ಯಾಸ, ಸಮಯಪಾಲನೆ ಹಾಗೂ ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ. ಈ ನಿಟ್ಟಿನಲ್ಲಿ ಎಪಿಜೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ತೋರಿಸಿರುವ ಸಾಧನೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಿದೆ.
ರಾಷ್ಟ್ರಮಟ್ಟಕ್ಕೆ ಸಿಂಚನಕಾಲೇಜಿನ ವಿದ್ಯಾರ್ಥಿನಿ ಸಿಂಚನ ಕೆ. ಎಚ್ ಅವರು ವೇಟ್‌ಲಿಫ್ಟಿಂಗ್‌ನಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಮತ್ತೊಂದು ಹೆಮ್ಮೆ ತಂದಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ವೇಟ್‌ಲಿಫ್ಟಿಂಗ್ ಕ್ರೀಡಾಕೂಟದಲ್ಲಿ 48 ಕೆ. ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಅವರು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಠಿಣ ಪರಿಶ್ರಮ, ನಿರಂತರ ತರಬೇತಿ ಮತ್ತು ಆತ್ಮವಿಶ್ವಾಸದ ಫಲವಾಗಿ ಸಿಂಚನ ಈ ಸಾಧನೆ ಮಾಡಿದ್ದಾರೆ. ಮುಂದಿನ ನವೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಕಾಲೇಜು ಹಾಗೂ ಜಿಲ್ಲೆಗೆ ಮತ್ತಷ್ಟು ಕೀರ್ತಿ ತರಬೇಕೆಂಬ ಆಶಯವನ್ನು ಎಲ್ಲರೂ ವ್ಯಕ್ತಪಡಿಸಿದ್ದಾರೆ.
ಇನ್ನು ಚಿನ್ಮಯಿ 3000 ಮೀಟರ್ ನಡಿಗೆ (ವಾಕ್ ರೇಸ್) ಹಾಗೂ ಗುಡ್ಡಗಾಡು ಓಟ (ಕ್ರಾಸ್ ಕಂಟ್ರಿ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದೆ. ಒಂದೇ ಕ್ರೀಡಾಕೂಟದಲ್ಲಿ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ತೋರಿದ ಈ ಸಾಮೂಹಿಕ ಸಾಧನೆ ಕಾಲೇಜಿನ ಕ್ರೀಡಾ ಚಟುವಟಿಕೆಗಳಿಗೆ ದೊರೆಯುತ್ತಿರುವ ಪ್ರೋತ್ಸಾಹಕ್ಕೆ ಸಾಕ್ಷಿಯಾಗಿದೆ.ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಕ್ರೀಡೆಯಲ್ಲಿ ವಿದ್ಯಾರ್ಥಿಗಳು ತೋರಿರುವ ಈ ಸಾಧನೆಗೆ ಉನ್ನತಿ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಡಿ. ಮುರಳಿ, ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ಮತ್ತು ಪ್ರೋತ್ಸಾಹ ನೀಡುವ ಮೂಲಕ ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.