ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಕಾನೂನು ನೆರವು ಪಡೆಯುವ ಹಕ್ಕಿದೆ: ಹೇಮಾವತಿ

KannadaprabhaNewsNetwork |  
Published : Oct 14, 2026, 01:30 AM IST
13ಎಚ್ಎಸ್ಎನ್14 :  | Kannada Prabha

ಸಾರಾಂಶ

ಆ್ಯಸಿಡ್ ದಾಳಿಗೆ ಒಳಗಾದವರು ತಮ್ಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆಯಲು, ನ್ಯಾಯಾಲಯದ ಪ್ರಕ್ರಿಯೆಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ನಿಯಮಾನುಸಾರ ದೊರೆಯುವ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಸಂತ್ರಸ್ತರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಮಹತ್ವದ ಪಾತ್ರ ವಹಿಸುತ್ತವೆ .

ಕನ್ನಡಪ್ರಭ ವಾರ್ತೆ ಹಾಸನ

ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರು ಸಮಾಜದಲ್ಲಿ ಗೌರವಯುತವಾಗಿ ಬದುಕಲು ಅಗತ್ಯವಾದ ಕಾನೂನು ನೆರವು, ಪರಿಹಾರ ಹಾಗೂ ಪುನರ್ವಸತಿ ಸೌಲಭ್ಯಗಳನ್ನು ಒದಗಿಸುವುದು ಅತ್ಯಂತ ಮುಖ್ಯವಾಗಿದೆ. ಸಂತ್ರಸ್ತರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ, ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಹೇಮಾವತಿ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಮೂರನೇ ಮಹಡಿಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ನಲ್ಸಾ (ಆ್ಯಸಿಡ್ ದಾಳಿಯ ಸಂತ್ರಸ್ತರಿಗೆ ಕಾನೂನು ಸೇವೆಗಳು)-೨೦೧೬’ ಕುರಿತ ಒಂದು ದಿನದ ಕಾನೂನು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿ, ಆ್ಯಸಿಡ್ ದಾಳಿಯು ಸಂತ್ರಸ್ತರ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲದೆ, ಅವರ ಮಾನಸಿಕ ಸ್ಥಿತಿ, ಸಾಮಾಜಿಕ ಜೀವನ ಹಾಗೂ ಭವಿಷ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಂತ್ರಸ್ತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಪರಿಹಾರ ಹಾಗೂ ಪುನರ್ವಸತಿ ಸೌಲಭ್ಯಗಳು ದೊರೆಯುವಂತೆ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಂತ್ರಸ್ತರು ನ್ಯಾಯ ಪಡೆಯಲು ಯಾವುದೇ ರೀತಿಯ ಅಡೆತಡೆ ಎದುರಿಸದಂತೆ ಕಾನೂನು ಸೇವೆಗಳ ಪ್ರಾಧಿಕಾರ ಅಗತ್ಯ ಸಹಕಾರ ನೀಡಲಿದೆ ಎಂಬ ಸಂದೇಶವನ್ನು ತಿಳಿಸಿದರು. ಆ್ಯಸಿಡ್ ದಾಳಿಗೆ ಒಳಗಾದವರು ತಮ್ಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆಯಲು, ನ್ಯಾಯಾಲಯದ ಪ್ರಕ್ರಿಯೆಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ನಿಯಮಾನುಸಾರ ದೊರೆಯುವ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಸಂತ್ರಸ್ತರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಪೊಲೀಸ್ ಅಧೀಕ್ಷಕರು ಶ್ರೀನಿಧಿ ಮಾತನಾಡಿ, ಕೆಲ ಘಟನೆಗಳಲ್ಲಿ ಪ್ರೀತಿ- ಪ್ರೇಮಕ್ಕೆ ಒಳಗಾಗಿ ನಂತರ ತನಗೆ ಸಿಗದಿದ್ದಾಗ ಇಂತಹ ಆ್ಯಸಿಡ್ ದಾಳಿ ಪ್ರಕರಣ ಸೇರಿ ಇತರೆ ಘಟನೆಗಳ ಬಗ್ಗೆ ತಿಳಿಸಿ ಕಾನೂನು ಸಲಹೆ ಬಗ್ಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಕಾರ್ಲೆ ಮೊಗಣ್ಣಗೌಡ ವಹಿಸಿದ್ದರು. ಐದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವಿಕುಮಾರ್ ಎಚ್.ಆರ್., ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ ಜಿ.ಕೆ., ಜಿಲ್ಲಾ ನಿರೂಪಣಾಧಿಕಾರಿ ಪವಿತ್ರ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು: ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಕಲಬೆರಕೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಮನ್ಮುಲ್ ಒಕ್ಕೂಟಕ್ಕೆ ಮುತ್ತಿಗೆ