ಲೋಕಸಭೆ ಚುನಾವಣೆ: ಸಾಮಾನ್ಯ ವೀಕ್ಷಕರಿಂದ ಸಭೆ
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕಿ ಹೇಮ ಪುಷ್ಪ ಶರ್ಮಾ(ಐ.ಎ.ಎಸ್) ಹೇಳಿದರು.
ಲೋಕಸಭೆ ಚುನಾವಣೆ ಹಿನ್ನೆಲೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಜಿಪಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಶೌಚಾಲಯ, ರ್‍ಯಾಂಪ್ ಸೇರಿದಂತೆ ಇತರ ಅಗತ್ಯ ಸೌಲಭ್ಯ ಒದಗಿಸಬೇಕು. ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಗಮನ ಹರಿಸಬೇಕು. ಇಂದು ನಾನು 16 ಮತಗಟ್ಟೆಗಳಿಗೆ ಭೇಟಿ ನೀಡಿದ್ದು, ಅಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿರುವುದು ಸಂತಸ ತಂದಿದೆ ಎಂದರು.
ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ 7 ತಾಲೂಕುಗಳು, 21 ಹೋಬಳಿ, 595 ಜನವಸತಿ ಗ್ರಾಮಗಳು, 9 ನಗರ ಸ್ಥಳೀಯ ಸಂಸ್ಥೆಗಳು, 153 ಗ್ರಾಪಂ, 5 ವಿಧಾನಸಭಾ ಕ್ಷೇತ್ರಗಳು, 1 ಜಿಪಂ ಹಾಗೂ 7 ತಾಲೂಕು ಪಂಚಾಯಿತಿಗಳಿದ್ದು, 1,317 ಮತಗಟ್ಟೆಗಳಿವೆ. ಇದರ ಜೊತೆಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ಹಾಗೂ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ವಿಧಾನಸಭಾ ಕ್ಷೇತ್ರಗಳು ಒಳಪಡುತ್ತದೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2,045 ಮತಗಟ್ಟೆಗಳಿವೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಎಂಸಿಸಿ ನೋಡಲ್ ಅಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ ಕುಮಾರ ಸೇರಿದಂತೆ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ವಿವಿಧ ತಂಡಗಳು, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.