ಹಾವೇರಿ: ಮೂಲಭೂತ ಹಕ್ಕುಗಳು ಹುಟ್ಟಿನಿಂದ ಬರುತ್ತವೆ. ಘನತೆಯ ಬದುಕಿಗೆ, ಮಾನವ ಹಕ್ಕುಗಳಿಗೆ ಚ್ಯುತಿಬಾರದಂತೆ ನಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಯಾದವ ವನಮಾಲಾ ಆನಂದರಾವ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್, ಜಿಲ್ಲಾ ನ್ಯಾಯವಾದಿಗಳ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.ಪ್ರತಿ ಪ್ರಜೆಗೂ ಘನತೆಯಿಂದ ಬದುಕುವ ಹಕ್ಕಿದೆ. ನಮ್ಮ ಹಿರಿಯರಿಂದ ಬಂದ ಘನತೆ-ಗೌರವ, ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಜೊತೆಗೆ ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ಎಲ್ಲರೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸಕರಾಗಿ ಭಾಗವಹಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾನೂನು ನೆರವು ಅಭಿರಕ್ಷಕ ಎಂ.ಸಿ. ಭರಮಣ್ಣನವರ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ವಾತಂತ್ರ್ಯ ಹಾಗೂ ಘನತೆಯಿಂದ ಬದುಕುವ ಹಕ್ಕಿದೆ. ಜೀವನ, ಸ್ವಾತಂತ್ರ್ಯ ಹಾಗೂ ಸಮಾನತೆಗೆ ಹೆಚ್ಚು ಒತ್ತು ನೀಡಲಾಗಿದೆ. ಪ್ರತಿ ಪ್ರಜೆಗೂ ಆಹಾರ, ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಎಲ್ಲರಿಗೂ ಸಮಾನ ಅವಕಾಶ ನೀಡುವ ಅಡಿಯಲ್ಲಿ ಸಂವಿಧಾನ ಹಾಗೂ ಕಾನೂನುಗಳನ್ನು ರಚಿಸಲಾಗಿದೆ ಎಂದು ಹೇಳಿದರು.ಮಾನವ ಹಕ್ಕುಗಳ ರಕ್ಷಣೆಗೆ ಮತ್ತು ಅವುಗಳ ಪರಿಣಾಮಕಾರಿ ಜಾರಿಗಾಗಿ ಮಾನವ ಹಕ್ಕುಗಳ ರಕ್ಷಣೆ ಕಾಯ್ದೆ ೧೯೯೩ರನ್ವಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ರಚನೆ ಮಾಡಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾದರೆ ಮಾನವ ಹಕ್ಕುಗಳ ಆಯೋಗಕ್ಕೆ ವಿವಿಧ ವಿಧಾನಗಳ ದೂರು ಸಲ್ಲಿಸಬಹುದು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮಾತನಾಡಿ, ಎಲ್ಲರೂ ತಮ್ಮ ಅನಿಸಿಕೆಗಳನ್ನು ಹೇಳಿಕೊಳ್ಳಲು ಮುಕ್ತ ಅವಕಾಶಗಳಿವೆ. ೧೮ ವರ್ಷದ ಪ್ರತಿ ಪ್ರಜೆಗೂ ಮತದಾನದ ಹಕ್ಕು ನೀಡಲಾಗಿದೆ. ಮಹಿಳೆ ಮತ್ತು ಪುರುಷರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಹಕ್ಕುಗಳನ್ನು ಪಡೆಯುವುದರೊಂದಿಗೆ ಬೇರೆಯವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಶಾಂತಿಯುತ ಸಮಾಜ ನಿರ್ಮಾಣ ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಹೇಳಿದರು.ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶು ಕುಮಾರ್ ಮಾನವ ಹಕ್ಕುಗಳ ಕುರಿತು ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ಸ್ವಾಗತಿಸಿದರು.