ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ದ ಕ್ರಮ: ಡಿಎಚ್‌ಒ

KannadaprabhaNewsNetwork |  
Published : Dec 16, 2023, 02:01 AM IST
ಜಿಲ್ಲಾ ಸಲಹಾ ಸಮಿತಿ ಸಭೆ | Kannada Prabha

ಸಾರಾಂಶ

ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಂದ ಅನುಮತಿ ಪಡೆಯದೆ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪ್ರಾರಂಭಿಸಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವ ರೇಡಿಯೋಲಜಿಸ್ಟ್‌ಗಳ ವಿರುದ್ಧ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆಯಡಿಯಲ್ಲಿ ಶಿಸ್ತು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ತಿಳಿಸಿದರು.

ಭ್ರೂಣಹತ್ಯೆ ಪ್ರಕರಣಗಳು ನಡೆಯದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಮಂಜುನಾಥ್‌ ಸೂಚನೆ

ಕನ್ನಡಪ್ರಭ ವಾರ್ತೆ ತುಮಕೂರು

ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಂದ ಅನುಮತಿ ಪಡೆಯದೆ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪ್ರಾರಂಭಿಸಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವ ರೇಡಿಯೋಲಜಿಸ್ಟ್‌ಗಳ ವಿರುದ್ಧ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆಯಡಿಯಲ್ಲಿ ಶಿಸ್ತು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಲಹಾ ಸಮಿತಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಅನಧಿಕೃತವಾಗಿ ಹೆಚ್ಚು ಭ್ರೂಣಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಆರೋಗ್ಯ ಇಲಾಖೆ ಸಚಿವರು ಮತ್ತು ಆಯುಕ್ತರು ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಕ್ರಮವಹಿಸಬೇಕೆಂದು ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿರುವ ರೇಡಿಯೋಲಜಿಸ್ಟ್‌ಗಳು ಯಾವುದಾದರೂ ಎರಡು ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಮಾತ್ರ ಕರ್ತವ್ಯ ನಿರ್ವಹಿಸಬೇಕು. ಎರಡಕ್ಕಿಂತ ಹೆಚ್ಚು ಕಡೆ ಕೆಲಸ ಮಾಡುತ್ತಿರುವುದು ಕಂಡು ಬಂದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಹಾಗೂ ಆ ಕೇಂದ್ರವನ್ನು ಸೀಲ್‌ಡೌನ್ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ತುರುವೇಕೆರೆ ತಾಲೂಕಿನ ಎರಡು ಸ್ಕ್ಯಾನಿಂಗ್ ಕೇಂದ್ರಗಳನ್ನು ಸೀಲ್‌ಡೌನ್ ಮಾಡಿ ನ್ಯಾಯಾಲಯಕ್ಕೆ ಪ್ರಕರಣವನ್ನು ಒಪ್ಪಿಸಲಾಗಿದೆ. ಸಾರ್ವಜನಿಕರು ಭ್ರೂಣ ಪತ್ತೆ ಮಾಡುವುಂತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಮಾಡುವಂತೆ ವೈದ್ಯರ ಮೇಲೆ ಒತ್ತಡ ಹಾಕಬಾರದು. ಈಗಾಗಲೇ ಗಂಡು ಮತ್ತು ಹೆಣ್ಣು ಲಿಂಗಾನುಪಾತ ವ್ಯತ್ಯಾಸವಾಗಿದೆ. ಲಿಂಗಾನುಪಾತ ಸಮತೋಲನದಲ್ಲಿಡುವುದಕ್ಕೆ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದರು.

ಜಿಲ್ಲೆಯಲ್ಲಿ ಇತ್ತೀಚೆಗೆ 18 ವರ್ಷದೊಳಗಿನ ಗರ್ಭಿಣಿಯರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಮದುವೆ ಮಾಡುತ್ತಿರುವ ಮಾಹಿತಿ ಕಂಡುಬಂದರೆ ಕೂಡಲೇ ಅಧಿಕಾರಿಗಳಿಗೆ ತಿಳಿಸಿದರೆ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಯೋಜನಾ ನಿರ್ದೇಶಕರು ಹಾಗೂ ರಾಜ್ಯ ಸಕ್ಷಮ ಪ್ರಾಧಿಕಾರ ಆದೇಶದಂತೆ ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯಡಿಯಲ್ಲಿ ಜಿಲ್ಲಾ ಸಲಹಾ ಸಮಿತಿಯನ್ನು ಪುನರ್ ರಚಿಸುವುದಕ್ಕೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಖಾ ಕೆ.ಬಿ., ಡಾ. ಲೋಕೇಶ್‌ರೆಡ್ಡಿ, ಜಿಲ್ಲಾ ತರಬೇತಿ ಕೇಂದ್ರ ಪ್ರಾಂಶುಪಾಲೆ ಡಾ. ಮುಕ್ತಾಂಭ, ವಕೀಲ ಕುಮಾರಸ್ವಾಮಿ ಎಂ.ಎನ್., ಸಮಾಜ ಸೇವಕಿ ಮಲ್ಲಿಕಾ ಜಿ., ಎನ್.ಜಿ.ಓ ರಾಣಿಚಂದ್ರಶೇಖರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ