ಕನ್ನಡಪ್ರಭ ವಾರ್ತೆ ಮಡಿಕೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ ಶುಕ್ರವಾರ ಚಾಲನೆ ನೀಡಿದರು.
ರಾಜಾಸೀಟನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಫಲಪುಷ್ಪ ಪ್ರದರ್ಶನ ವಿಭಿನ್ನ ಹಾಗೂ ವಿಶಿಷ್ಟವಾಗಿದ್ದು, ನೋಡುಗರನ್ನು ಗಮನಸೆಳೆಯುತ್ತಿದೆ ಎಂದು ಸಚಿವರು ಹೇಳಿದರು. ಕೊಡಗು ಜಿಲ್ಲೆಯ ಅಭಿವೃದ್ಧಿ ಸಂಬಂಧಿಸಿದಂತೆ ಶಾಸಕರ ಜೊತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ಸಲ್ಲಿಸಲಾಗುವುದು. ಕೊಡಗು ಜಿಲ್ಲೆಯ ಅಭಿವೃದ್ಧಿ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಬಣ್ಣ ಬಣ್ಣದ ಚಿತ್ತಾರದ ಹೂವುಗಳು ನೋಡುಗರನ್ನು ಚಕಿತಗೊಳಿಸುತ್ತಿದ್ದು, ರಾಜಾಸೀಟು ಉದ್ಯಾನವನದಲ್ಲಿ ನಿರಂತರವಾಗಿ ಪುಷ್ಪ ಪ್ರದರ್ಶನಗಳು ನಡೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹಾಪ್ ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಾಚೇಟ್ಟಿರ ಚೋಟು ಕಾವೇರಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಯೋಗೇಶ್, ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ ಮತ್ತಿತರರು ಇದ್ದರು.
28ರ ತನಕ ಫಲಪುಷ್ಪ ಪ್ರದರ್ಶನ:ತೋಟಗಾರಿಕೆ ಇಲಾಖೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜ.26 ರಿಂದ 28 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಿದೆ.
ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಕುಲದೇವತೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಲಾಕೃತಿಯನ್ನು 15 ಅಡಿ ಎತ್ತರದಲ್ಲಿ 48 ಅಡಿ ಉದ್ದ, 28 ಅಡಿ ಅಗಲದಲ್ಲಿ ಗುಲಾಬಿ, ಸೇವಂತಿಗೆ, ಆಸ್ಟರ್ ಹೂವುಗಳ ವಿವಿಧ ಬಣ್ಣದ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದ್ದು, ಆಕರ್ಷಣೀಯವಾಗಿದೆ.
ಮಕ್ಕಳಿಗೆ ಮನರಂಜನೆ ನೀಡುವಂತಹ ಚೋಟಾ ಭೀಮ್, ಬಾರ್ಬಿ ಡಾಲ್, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಅಣಬೆ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಪೋಟೋ ಪ್ರೇಮ್, ಸೆಲ್ಫಿ ಜೋನ್ ಮಾದರಿಗಳನ್ನು ನಿರ್ಮಿಸಲಾಗಿದೆ.