ಟ್ಯಾಂಕರ್‌ಗಳ ಮೂಲಕ ಕುಡಿವ ನೀರು ಪೂರೈಕೆಗೆ ಕ್ರಮ

KannadaprabhaNewsNetwork |  
Published : Mar 12, 2024, 02:03 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್   | Kannada Prabha

ಸಾರಾಂಶ

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಜನ-ಜಾನುವಾರುಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿವೆ. ಕುಡಿವ ನೀರಿಗೆ ತೊಂದರೆಯಾಗದಂತೆ ಬೇರೆ ಭಾಗಗಳಿಂದ ಹೋಬಳಿಯ ಎಲ್ಲಾ ಗ್ರಾಮಗಳಿಗೂ ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳುವುದು.

ಹಿರಿಯೂರು: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಜನ-ಜಾನುವಾರುಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿವೆ. ಕುಡಿವ ನೀರಿಗೆ ತೊಂದರೆಯಾಗದಂತೆ ಬೇರೆ ಭಾಗಗಳಿಂದ ಹೋಬಳಿಯ ಎಲ್ಲಾ ಗ್ರಾಮಗಳಿಗೂ ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಜವನಗೊಂಡನಹಳ್ಳಿ ಗ್ರಾಮದ ನಾಡಕಚೇರಿ ಹತ್ತಿರದ ಗಣೇಶ ದೇವಸ್ಥಾನದ ಆವರಣದಲ್ಲಿ ಸೋಮವಾರ ಆಯೋಜಿಸಲಾದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜವನಗೊಂಡನಹಳ್ಳಿ ಹೋಬಳಿಯಲ್ಲಿ ಅಂತರ್ಜಲಮಟ್ಟ ತುಂಬಾ ಕುಸಿದಿದೆ. ಸಾವಿರ ಅಡಿ ಬೋರ್‌ವೆಲ್ ಕೊರೆದರೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ 9 ಬೋರ್‌ವೆಲ್ ಕೊರೆಯಲಾಗಿದ್ದು, ಅದರಲ್ಲಿ 5 ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿದೆ. ಮುಂದಿನ ದಿನಗಳಲ್ಲಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಟ್ಯಾಂಕರ್ ನೀಡುವ ಆಲೋಚನೆಯಿದೆ.‌ ಅಲ್ಲಿಯವರೆಗೆ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಈ ಭಾಗದ ಸಾಕಷ್ಟು ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ಹಿರಿಯೂರು ತಾಲೂಕಿನಾದ್ಯಂತ 100 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಭದ್ರಾ ಮೇಲ್ದಂಡೆ ಯೋಜನೆಯ ಪೈಪ್‌ಲೈನ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಹ ಜನತಾ ದರ್ಶನ ಮಾಡುತ್ತಿದ್ದಾರೆ. ಸಚಿವರ ನೇತೃತ್ವದಲ್ಲಿ ಜರುಗುವ ಜನತಾ ದರ್ಶನದಲ್ಲಿ ಸ್ವೀಕರಿಸುವ ಅರ್ಜಿಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷೆ ತೋರದೆ, ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಮುಖ್ಯಮಂತ್ರಿ ಹಾಗೂ ಸಚಿವರನ್ನು ಅರಸಿ ಅರ್ಜಿ ಹಿಡಿದು ಅಲೆದಾಡುವುದನ್ನು ತಪ್ಪಿಸಲು‌, ನಿರಂತರವಾಗಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲೆ, ತಾಲೂಕು ಹಾಗೂ ಗ್ರಾಮಗಳಲ್ಲಿ ಆಯೋಜಿಸಲಾಗಿದೆ. ತೀವ್ರ ತರನಾದ ಬರದ ಹಿನ್ನೆಯಲ್ಲಿ ಜಿಲ್ಲೆಯಾದ್ಯಂತ ಯುದ್ಧಸನ್ನದ್ಧ ರೀತಿಯ ಕುಡಿಯುವ ನೀರಿನ ಸೌಲಭ್ಯ ಹಾಗೂ ಪರಿಹಾರದ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು‌.

ತಹಸೀಲ್ದಾರ್ ರಾಜೇಶ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ, ತಾಲೂಕಿನಲ್ಲಿ ಇದುವರೆಗೆ 643 ಅರ್ಜಿಗಳು ಜನತಾ ದರ್ಶನದಲ್ಲಿ ಸಲ್ಲಿಕೆಯಾಗಿವೆ. ಇದರೊಂದಿಗೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತವಾದ 36 ಅರ್ಜಿಗಳಿಗೂ ಸಹ ಪರಿಹಾರ ಒದಗಿಸಲಾಗಿದೆ ಎಂದರು.

ಜವನಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಅಲ್ತಾಫ್ ಮಾತನಾಡಿ, ಅಹವಾಲುಗಳನ್ನು ಸಲ್ಲಿಸಲು ಹೋಬಳಿ, ತಾಲೂಕು ಹಾಗೂ ಜಿಲ್ಲಾ ಕೇಂದ್ರಕ್ಕೆ ಹೋಗುವ ಪರಿಸ್ಥಿತಿ ತಪ್ಪಿಸಲು, ಗ್ರಾಮದಲ್ಲಿಯೇ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ತಂದಿದೆ. ಜವನಗೊಂಡನಹಳ್ಳಿ ಗ್ರಾಮ ರಂಗನಾಥಪುರ ಬೆಸ್ಕಾಂ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸೇರಿದೆ. ಇದರಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ಅನಿಮಿಯತ ವ್ಯತ್ಯಯ ಉಂಟಾಗುತ್ತಿದೆ. ಇದರ ಬದಲು ಗ್ರಾಮದಲ್ಲಿ ವಿದ್ಯುತ್ ವಿತರಣಾ ಶಾಖಾ ಕಚೇರಿ ನಿರ್ಮಿಸಬೇಕು. ಗುಡ್ಡದಲ್ಲಿನ ಕುಡಿಯುವ ನೀರು ಸರಬರಾಜು ಕೇಂದ್ರಕ್ಕೆ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಕರಿಯಾಲ ಗ್ರಾಪಂ ಉಪಾಧ್ಯಕ್ಷ ರಾಮಣ್ಣ ಮಾತನಾಡಿ, ಕರಿಯಾಲ ಗ್ರಾಮದಲ್ಲಿ ಒಂದು ಸಾವಿರ ಅಡಿ ಕೊರೆದರೂ ನೀರು ಸಿಗುತ್ತಿಲ್ಲ. ಟ್ಯಾಂಕರ್ ಇದ್ದರೂ ಗೋಶಾಲೆಗಳಿಗೆ ನೀರು ನೀಡಲು ಆಗುತ್ತಿಲ್ಲ. ಸಮಸ್ಯೆ ಪರಿಹಾರಕ್ಕಾಗಿ ಹೋಬಳಿಯ ಗಾಯಿತ್ರಿ ಜಲಾಶಯಕ್ಕೆ ಯಾವುದಾದರೂ ಮೂಲದಿಂದ ನೀರು ತುಂಬಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿವತಿಯಿಂದ ಪಿಯುಸಿಯಲ್ಲಿ ಉತ್ತೀರ್ಣರಾದ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆ ಪಂಚಾಮಿತ್ರ ವಾಟ್ಸ್ಯಾಪ್‌ ನಂಬರ್ ಬಿಡುಗಡೆಗೊಳಿಸಲಾಯಿತು. ಕಾಡುಗೊಲ್ಲ ಜಾತಿ ಪ್ರಮಾಣಪತ್ರ ವಿತರಣೆ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜವನಗೊಂಡನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಸುಮ, ಜಿಪಂ ಉಪಕಾರ್ಯದರ್ಶಿ ತಿಮ್ಮಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಇಓ ಸತೀಶ್ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!