ಕನ್ನಡಪ್ರಭ ವಾರ್ತೆ ಬಾದಾಮಿ
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು, ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡುವ ಚುನಾವಣೆಯ ಸಂದರ್ಭದಲ್ಲಿ ಬಾಗಲಕೋಟೆ ನಗರದಿಂದ ಸಮಾಜಘಾತುಕ ಗೂಂಡಾಗಳನ್ನು ಕರೆಸಿ, ಮಾರಕಾಸ್ತ್ರಗಳನ್ನು ಸಂಗ್ರಹ ಮಾಡಿಕೊಂಡು ಗಲಭೆ ಸೃಷ್ಟಿ ಮಾಡುವ ದುರುದ್ದೇಶದಿಂದ ಚುನಾವಣೆ ನಡೆಯುವ ಸ್ಥಳದಲ್ಲಿ ಹಾಜರಿದ್ದರು. ಪೊಲೀಸ್ ಇಲಾಖೆಯ ಮುಂಜಾಗ್ರತಾ ಕ್ರಮವಾಗಿ ಆರೋಪಿಗಳ ಹಾವ-ಭಾವಗಳನ್ನು ಗುರುತಿಸಿ ಆರೋಪಿತರ ವಾಹನಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ. ಇನ್ನೂ ನಾಲ್ಕು ಜನ ಪರಾರಿಯಾಗಿದ್ದಾರೆ. ಈ ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಈ ಘಟನೆ ಹಿಂದೆ ಯಾರಿದ್ದಾರೆ ಎಂಬ ಸತ್ಯ ತಿಳಿದುಕೊಂಡು ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಈ ಸಮಾಜಘಾತಕ ರೌಡಿಗಳನ್ನು ಯಾವ ಉದ್ದೇಶಕ್ಕಾಗಿ ಈ ಚುನಾವಣೆ ನಡೆಯುವ ಸಂದರ್ಭದಲ್ಲಿ ಯಾರು ಇವರನ್ನು ಕರಿಸಿದ್ದರು?, ಈ ರೌಡಿಗಳ ಹಿಂದೆ ಇರುವ ಪ್ರಭಾವಿ ವ್ಯಕ್ತಿಗಳು ಯಾರು?, ಶಾಂತಿ ಸುವ್ಯವಸ್ಥೆಯಿಂದ ಇರುವ ಗುಳೇದಗುಡ್ಡ ಪಟ್ಟಣದಲ್ಲಿ ಭಯಾನಕ ವಾತಾವರಣವನ್ನು ಸೃಷ್ಟಿ ಮಾಡಲು ಲಾಂಗು, ಮಚ್ಚು, ತಲ್ವಾರು ತರಿಸಿದ ಪ್ರಭಾವಿ ವ್ಯಕ್ತಿಗಳು ಯಾರು? ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ಬಂಧನವಾಗಿರುವ ಆರೋಪಿಗಳಿಗೆ ಜಾಮೀನು ನೀಡಲು ಹಾಗೂ ಕಾನೂನಿನ ನೆರವು ನೀಡಲು ತೆರೆಮರೆಯಲ್ಲಿ ಕಾರ್ಯ ನಿರ್ವಹಿಸುವವರು ಯಾರು? ಎಂಬುವುದನ್ನು ಪತ್ತೆ ಹಚ್ಚಬೇಕು ಹಾಗೂ ಇಂತಹ ದ್ವೇಷ ಮತ್ತು ನೀಚ ರಾಜಕಾರಣಕ್ಕಾಗಿ ಸಾರ್ವಜನಿಕರ ಶಾಂತಿಗೆ ಭಂಗ ಉಂಟು ಮಾಡಲು ಯತ್ನಿಸಿದವರು ಯಾರೇ ಆಗಿರಲಿ ಅವರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿ ಮಾಡಬೇಕು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.