ಕನ್ನಡಪ್ರಭ ವಾರ್ತೆ ಕುಶಾಲನಗರ ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಹರಿಯುವ ಕಾವೇರಿ ನದಿಗೆ ನೇರವಾಗಿ ಸೇರುತ್ತಿರುವ ಗ್ರಾಮಗಳ ಮತ್ತು ಪುರಸಭೆ ವ್ಯಾಪ್ತಿಯ ಕಲುಷಿತ ನೀರಿನ ಸಮರ್ಪಕ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ. ಅವರು ಕುಶಾಲನಗರದ ತಾಲೂಕು ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ನದಿಯ ನೇರ ಕಲುಷಿತೆಯನ್ನು ತಪ್ಪಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕಾರ್ಯ ಯೋಜನೆಗಳನ್ನು ರೂಪಿಸಲಾಗುವುದು ಎಂದರು. ಕುಶಾಲನಗರ ಒಳಚರಂಡಿ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರುಸ್ಥಳೀಯ ಮತ್ತು ಪ್ರವಾಸಿಗರಿಗೆ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕರಪತ್ರಗಳನ್ನು ಹಂಚುವ ಮೂಲಕ ಮತ್ತು ಗಡಿಭಾಗಗಳಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ ಎಂದರು. ಈ ಸಂದರ್ಭ ಉಪಸ್ಥಿತರಿದ್ದ ಉಪ ವಿಭಾಗಾಧಿಕಾರಿಗಳಾದ ನಿತಿನ್ ಚಕ್ಕಿ ಅವರಿಗೆ ಕಾವೇರಿ ನದಿ ಕಲುಷಿತ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ಸಲಹೆ ನೀಡಿದರು. ತಾಲೂಕು ತಹಸೀಲ್ದಾರ್ ಅವರ ಮೂಲಕ ನದಿ ಸಂರಕ್ಷಣೆಯ ಕುರಿತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಕುಶಾಲನಗರ ತಾವರೆಕೆರೆ ಅಭಿವೃದ್ಧಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ವ್ಯಕ್ತಪಡಿಸಿದರು. ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಐಶ್ವರ್ಯ ತಾಲೂಕು ತಹಸಿಲ್ದಾರ್ ಕಿರಣ್ ಜಿ ಗೌರಯ್ಯ ಇದ್ದರು.