ಕ್ವಾರಿ ದುರಂತದ ವರದಿ ತರಿಸಿ ಕ್ರಮ : ಸಿಎಂ

KannadaprabhaNewsNetwork |  
Published : Jul 03, 2026, 02:00 AM IST
quarry

ಸಾರಾಂಶ

ಮಾಗಡಿ ರಸ್ತೆ ಬಳಿಯ ಎರಡು ಕ್ವಾರಿಯಲ್ಲಿ ಕುಸಿತವಾಗಿ 7 ಮಂದಿ ಮೃತಪಟ್ಟಿರುವ ಪ್ರಕರಣದ ಕುರಿತು ಮಾಹಿತಿ ಪಡೆದ ಬಳಿಕ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

 ಬೆಂಗಳೂರು :  ಮಾಗಡಿ ರಸ್ತೆ ಬಳಿಯ ಎರಡು ಕ್ವಾರಿಯಲ್ಲಿ ಕುಸಿತವಾಗಿ 7 ಮಂದಿ ಮೃತಪಟ್ಟಿರುವ ಪ್ರಕರಣದ ಕುರಿತು ಮಾಹಿತಿ ಪಡೆದ ಬಳಿಕ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಪೊಲೀಸ್‌ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರ್ಘಟನೆ ನಡೆದ ಕ್ವಾರಿಗಳು ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಎಂಬ ಬಗ್ಗೆ ವರದಿ ನೀಡುವಂತೆ ತಿಳಿಸಿದ್ದೇನೆ. ವರದಿ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದ್ದೇ ಆದ ನಿಯಮಗಳಿದ್ದು, ಅವುಗಳು ಪಾಲನೆಯಾಗುತ್ತಿವೆಯೇ ಎಂಬುದನ್ನು ಪರಿಶೀಲಿಸಲಾಗುವುದು ಎಂದರು.

ಮೃತರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಪರಿಹಾರ ನೀಡುವ ಬಗ್ಗೆ ತೀರ್ಮಾನಿಸಲಾಗುವುದು. ತರಾತುರಿಯಲ್ಲಿ ಪರಿಹಾರ ಘೋಷಿಸಲಾಗದು. ಅದಕ್ಕೆ ಅದರದ್ದೇ ಆದ ಪ್ರಕ್ರಿಯೆಗಳಿವೆ. ಸಂತ್ರಸ್ತರಿಗೆ ಖಂಡಿತ ಪರಿಹಾರ ನೀಡಲಾಗುವುದು ಮತ್ತು ಈ ರೀತಿಯ ದುರ್ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರವಹಿಸಲಾಗುವುದು ಎಂದು ಹೇಳಿದರು. 

ಮೃತರ ಕುಟುಂಬಗಳಿಗೆ ಮಾಲೀಕರ ಪರಿಹಾರ?: 

ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದ ಬಳಿ ನಡೆದ ಭೀಕರ ಕ್ವಾರಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಗಣಿ ಮಾಲೀಕರಿಂದಲೇ ಕೊಡಿಸುವುದಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ಪರಿಹಾರವನ್ನು ಆಯಾ ಕ್ವಾರಿ ಮಾಲೀಕರಿಂದಲೇ ಕೊಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಗಣಿ ಮಾಲೀಕರು ಒಪ್ಪಿಗೆ ನೀಡಿದ್ದು, ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಹಾಗೂ ಗಾಯಾಳುಗಳಿಗೆ ₹5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸದ್ಯ ಕ್ವಾರಿ ದುರಂತದಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ. ಜೊತೆಗೆ ಗಾಯಗೊಂಡ ಐವರು ಕಾರ್ಮಿಕರ ಸ್ಥಿತಿ ಕೂಡ ಚಿಂತಾಜನಕವಾಗಿದೆ. ರಕ್ಷಣಾ ಕಾರ್ಯಾಚರಣೆ ಬಳಿಕ ಇವರನ್ನು ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕ್ವಾರಿಯ ಸುತ್ತ-ಮುತ್ತಲಿನ ಎಲ್ವಾ ಕ್ವಾರಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಸೂಚನೆ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮೂಲಗಳು ತಿಳಿಸಿವೆ.

ಈ ನಡುವೆ ರಾಜ್ಯ ಸರ್ಕಾರ ಪ್ರಕರಣ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಕುರಿತು ತೀರ್ಮಾನ ಮಾಡಲಾಗುವುದು. ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡುವುದಿಲ್ಲ ಎಂದು ಹೇಳಿದೆ. 

ನಿಯಮ ಉಲ್ಲಂಘಿಸಿದವರ ವಿರುದ್ಧ ಸರ್ಕಾರ ಕ್ರಮ:  

ಗಣಿ ಅನುಮತಿಗಳನ್ನು ಯಾರು ನೀಡುತ್ತಿದ್ದಾರೆ ಎಂಬುದರ ಕುರಿತು ಪರಿಶೀಲನೆ ನಡೆಸಿ, ಅಗತ್ಯವಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದ ಬಳಿ ಕ್ರಷರ್‌ ಬಂಡೆ ಕುಸಿದು ಏಳು ಕಾರ್ಮಿಕರು ಸಾವಿಗೀಡಾಗಿರುವ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕಾರ್ಮಿಕರ ಸುರಕ್ಷತೆ ಕಾಪಾಡುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ನಮ್ಮ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಆಲಮಟ್ಟಿ ಜಲಾಶಯ ಪರಿಶೀಲಿಸಿದ ತಜ್ಞರ ತಂಡ
ಎಸ್ಡಿಎಂಎಫ್ ಕಾಮಗಾರಿ ಪರಿಶೀಲಿಸಿದ ಡಿಸಿ