-ಜಿಲ್ಲೆಯ ವಿವಿಧೆಡೆ ಟ್ಯಾಂಕರ್, ಖಾಸಗಿ ಬೋರ್‌ವೆಲ್ ಮೂಲಕ ನೀರು । 56 ವಾರಗಳಿಗಾಗುವಷ್ಟು ಮೇವಿನ ದಾಸ್ತಾನು ಲಭ್ಯ
ಕನ್ನಡಪ್ರಭ ವಾರ್ತೆ ಯಾದಗಿರಿ
ಬೇಸಿಗೆಯ ಈ ಸಂದರ್ಭದಲ್ಲಿ ಮುಂಬರುವ ದಿನಗಳಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳು-ಸಾರ್ವಜನಿಕರಿಗೆ ಸಲಹೆಗಳು, ಜನ-ಜಾನುವಾರುಳಿಗೆ ಕುಡಿವ ನೀರು-ಮೇವಿನ ಸಮಸ್ಯೆ ಎದುರಾಗದಂತೆ ಕೈಗೊಂಡ ಪರಿಹಾರ ಕ್ರಮಗಳು, ಮಾ.21ರಿಂದ ಆರಂಭಗೊಳ್ಳಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ನಡೆಸಿರುವ ಸಿದ್ಧತೆಗಳು, ಅಕಾಲಿಕ ಮಳೆ, ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಜಾಗೃತಿ ಮೂಡಿಸುವ ಹಾಗೂ ವಿದ್ಯುತ್ ಅವ್ಯವಸ್ಥೆ ಸರಿಪಡಿಸುವಲ್ಲಿ ಜೆಸ್ಕಾಂನಿಂದ ಕೈಗೊಳ್ಳಬೇಕಾದ ಸೇರಿದಂತೆ ಮುಂತಾದವುಗಳ ಕುರಿತು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ನೇತೃತ್ವದಲ್ಲಿ, ಜಿಲ್ಲಾ ಪಂಚಾಯತ್ ಸಿಇಒ ಲವೀಶ ಒರಡಿಯಾ ಹಾಗೂ ಎಸ್ಪಿ ಪೃಥ್ವಿಕ್ ಶಂಕರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಹತ್ವದ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಡಾ. ಸುಶೀಲಾ, ಮೇ ಮಾಸಾಂತ್ಯದವರೆಗೆ ಸಂಭಾವ್ಯ ನೀರಿನ ಕೊರತೆಯಾಗಬಹುದು ಎಂದು 91 ಗ್ರಾಮಗಳನ್ನು ಗುರುತಿಸಲಾಗಿದ್ದು, ಇಂತಹ ಕಡೆಗಳಲ್ಲಿ ಟ್ಯಾಂಕರ್ ಮೂಲಕ ಹಾಗೂ ಖಾಸಗಿ ಬೋರ್‌ವೆಲ್‌ಗಳ ಜೊತೆ ಒಪ್ಪಂದ ಮಾಡಿಕೊಂಡು ನೀರಿನ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ ಎಂದರು.
ಹೆಚ್ಚುವ ಬಿಸಿಲ ತಾಪ: ಜಿಲ್ಲೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್, ಮೇ ತಿಂಗಳಿನಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪುವ ಸಂಭವವಿರುತ್ತದೆ ಎಂದು ಮುನ್ನೆಚ್ಚರಿಕೆ ನೀಡಿದ್ದರಿಂದ, ಜಿಲ್ಲೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್, ಮೇ ತಿಂಗಳಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಮತ್ತು ಬಿಸಿಗಾಳಿ ಬೀಸುವ ಸಂಭವವಿರುತ್ತದೆ, ಗರಿಷ್ಠ ತಾಪಮಾನ ಮತ್ತು ಬಿಸಿಗಾಳಿಯಿಂದ ಪ್ರತಿಕೂಲ ಪರಿಣಾಮ ತಗ್ಗಿಸಲು ಸಾರ್ವಜನಿಕರು ಮುಂಜಾಗ್ರತೆ ಕ್ರಮವಹಿಸಬೇಕು ಎಂದರು.
ಬಿಸಿಗಾಳಿಯಿಂದ ಹಾಗೂ ಆಕಸ್ಮಿಕ ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಮುಂಜಾಗ್ರತೆ ಬಗ್ಗೆ ಕಾರ್ಯಾಗಾರ, ಡಂಗೂರ ಸಾರುವ, ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
- ಎಸ್ಸೆಸ್ಸೆಲ್ಸಿ ಪರೀಕ್ಷೆ ಸಕಲ ಸಿದ್ಧತೆ
ಜಿಲ್ಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು, ಕಸ್ಟೋಡಿಯನ್, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿ ಕಾರಿಗಳು, 350ಕ್ಕಿಂತಲೂ ಹೆಚ್ಚಿನ ನೋಂದಣಿಯಿರುವ ಪರೀಕ್ಷೆ ಕೇಂದ್ರಗಳಿಗೆ ಒರ್ವ ಉಪ ಅಧೀಕ್ಷಕ ರನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ 9 ಸೂಕ್ಷ್ಮ ಪರೀಕ್ಷೆ ಕೇಂದ್ರಗಳಿದ್ದು, ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
-----
19ವೈಡಿಆರ್7 : ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.----
-ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಯತ್ನ