ಮನೆ-ಮನೆ ಸಮೀಕ್ಷೆ ನಡೆಸಿ ಶಾಲಾ ಆವರಣ ಸ್ಚಚ್ಛಗೊಳಿಸಿ
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರಲು ಕ್ರಮಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿ 6 ರಿಂದ 16 ವರ್ಷದೊಳಗಿನ ಪ್ರತಿ ಮಗುವಿಗೂ ಕಡ್ಡಾಯ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಮನೆ ಮನೆ ಸಮೀಕ್ಷೆ ಮಾಡುವ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಸಂಬಂಧ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಶಾಲೆ ಬಿಟ್ಟ 6 ರಿಂದ 16 ವರ್ಷದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ ಮಕ್ಕಳು ಶಾಲೆಯನ್ನು ಬಿಡಲು ಕಾರಣವೇನೆಂಬುದನ್ನು ಪರಿಶೀಲಿಸಿ ವರದಿ ನೀಡಬೇಕೆಂದು ಸೂಚಿಸಿದರು.ಶಾಲೆ ಬಿಟ್ಟ ಮಕ್ಕಳ ಮೇಲೆ ಹೆಚ್ಚು ನಿಗಾ ವಹಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆಯು ಸಹಾಯವಾಣಿಯನ್ನು ತೆರೆದಿದ್ದು, ಸಾರ್ವಜನಿಕರು ಅಂಗಡಿ-ಮುಂಗಟ್ಟು, ಬೀದಿ ಬದಿ, ಭಿಕ್ಷಾಟನೆಯಲ್ಲಿ ತೊಡಗಿರುವ ಹಾಗೂ ವಲಸೆ ಬಂದ, ಕಟ್ಟಡ ಕಾರ್ಮಿಕ ಮಕ್ಕಳು ಕಂಡುಬಂದಲ್ಲಿ ಸಹಾಯವಾಣಿ ಸಂಖ್ಯೆ 0816-2278444ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ನೀಡಬೇಕು ಎಂದು ತಿಳಿಸಿದರು.ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಶಿಕ್ಷಣ ಇಲಾಖೆಯ ಸಹಕಾರದಲ್ಲಿ ಕ್ರಮ ವಹಿಸಬೇಕು. ಮನೆ-ಮನೆ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಾಲೆಯ ಆವರಣದಲ್ಲಿ ನೀರು ನಿಲ್ಲದಂತೆ ಸ್ವಚ್ಛಗೊಳಿಸಿ, ಗ್ರಾಮ ಪಂಚಾಯತಿ ಸಹಯೋಗದಲ್ಲಿ ಶಾಲೆಗಳ ಸುತ್ತ ಮುತ್ತ ವಾರಕ್ಕೆರಡು ಬಾರಿ ಧೂಮೀಕರಣ ಮಾಡುವಂತೆ ಸೂಚನೆ ನೀಡಿದರು.ಜಿಪಂ ಸಿಇಒ ಜಿ.ಪ್ರಭು ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ ಕೆಲಸಗಳಿಗೆ ಸೀಮಿತವಾಗಿರದೆ ತಮ್ಮ ಕಾರ್ಯ ವ್ಯಾಪ್ತಿಯ ಪ್ರತಿಯೊಂದು ಶಾಲೆಗೂ ತೆರಳಿ ವಿಷಯವಾರು ಶಿಕ್ಷಕರ ಲಭ್ಯತೆ, ಮಕ್ಕಳ ಹಾಜರಾತಿ, ಮಕ್ಕಳ ಗುಣಮಟ್ಟ ಕಲಿಕೆಯ ಬಗ್ಗೆ ಖುದ್ದು ಪರಿಶೀಲಿಸಬೇಕು. ಮಕ್ಕಳು ಯಾವ ವಿಷಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂಬುದನ್ನು ತಿಳಿದುಕೊಂಡು ಅಂತಹ ವಿಷಯ ಶಿಕ್ಷಕರು ವಿಶೇಷ ತರಗತಿ ನಡೆಸಬೇಕೆಂದು ತಿಳಿಸಿದರು.
ಸಭೆಯಲ್ಲಿ ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ಮಂಜುನಾಥ್, ಉಪಯೋಜನಾ ಸಮನ್ವಯಾಧಿಕಾರಿ ಅನಂತಕುಮಾರ್, ಸಹಾಯಕ ಯೋಜನಾಧಿಕಾರಿ ತಾರಾಮಣಿ, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಉಪಸ್ಥಿತರಿದ್ದರು.ಬಾಕ್ಸ್‌ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ಕಾರ್ಯಕ್ರಮ ರೂಪಿಸಿಜಿಲ್ಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಡ್ಡಾಯವಾಗಿ ಭೇಟಿ ನೀಡಿ ಅಂತಹ ಶಾಲೆಗಳ ಫಲಿತಾಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕೆಂದು ಜಿಪಂ ಸಿಇಒ ಜಿ.ಪ್ರಭು ತಿಳಿಸಿದರು
ಪೋಟೊತುಮಕೂರಿನ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಸಂಬಂಧ ಅಧಿಕಾರಿಗಳ ಸಭೆ ನಡೆಯಿತು.