ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಶೀಘ್ರವೇ ಕ್ರಮ: ಶಾಸಕ ನಾರಾ ಭರತ್ ರೆಡ್ಡಿ

KannadaprabhaNewsNetwork |  
Published : Sep 25, 2025, 01:00 AM IST
ಬಳ್ಳಾರಿಯ ವಾಲ್ಮೀಕಿ ಭವನದಲ್ಲಿ ಜರುಗಿದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ನಾರಾ ಭರತ್ ರೆಡ್ಡಿ ಚಾಲನೆ ನೀಡಿದರು.  | Kannada Prabha

ಸಾರಾಂಶ

ಬಳ್ಳಾರಿ ಸ್ವಚ್ಛ ಹಾಗೂ ಸುಂದರ ನಗರವಾಗಿಸಲು ಪೌರ ಕಾರ್ಮಿಕರ ಶ್ರಮ ಅಪಾರವಾಗಿದೆ.

ಬಳ್ಳಾರಿ: ನಗರದಲ್ಲಿ ಈಗಾಗಲೇ 130 ಪೌರ ಕಾರ್ಮಿಕರನ್ನು ಕಾಯಂಗೊಳಿಸಲಾಗಿದ್ದು, ಇನ್ನು 121 ಪೌರಕಾರ್ಮಿಕರನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರನ್ನು ಸಹ ಶೀಘ್ರವೇ ಕಾಯಂಗೊಳಿಸಲಾಗುವುದು ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಭರವಸೆ ನೀಡಿದರು.

ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಳ್ಳಾರಿ ಸ್ವಚ್ಛ ಹಾಗೂ ಸುಂದರ ನಗರವಾಗಿಸಲು ಪೌರ ಕಾರ್ಮಿಕರ ಶ್ರಮ ಅಪಾರವಾಗಿದೆ. ನಿಜಕ್ಕೂ ಇವರು ಕಾಯಕ ಜೀವಿಗಳಾಗಿದ್ದಾರೆ. ಪೌರ ಕಾರ್ಮಿಕರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸಿದ್ಧವಿದ್ದು, ದುಡಿವ ಜನರ ಹಕ್ಕುಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ-ನಿಮ್ಮೆಲ್ಲರದ್ದಾಗಿದೆ ಎಂದು ಹೇಳಿದರು.

ಬಳ್ಳಾರಿ ನಗರ ಅಭಿವೃದ್ಧಿಯತ್ತ ಸಾಗುತ್ತಿದೆ. ಇನ್ನು ಕೆಲವು ಕಾಮಗಾರಿಗಳು, ರಸ್ತೆ ಅಗಲೀಕರಣ ಕಾಮಗಾರಿಗಳು ಬಾಕಿ ಇದ್ದು ಅದನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು. ಸುವರ್ಣ ಬಳ್ಳಾರಿಯನ್ನಾಗಿ ಮಾಡುವ ಕನಸು ನನ್ನದಾಗಿದೆ. ಯಾರು ಏನೇ ಹೇಳಿದರೂ ನಾನು ಮಾತ್ರ ಬಳ್ಳಾರಿ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಹಲವಾರು ಟೀಕೆಗಳು ಬಂದರೂ ನನ್ನ ಅಭಿವೃದ್ಧಿ ಕಾರ್ಯವನ್ನು ಮುಂದಿನ ಪೀಳಿಗೆಗೆ ಉಪಯೋಗವಾಗುವ ರೀತಿಯಲ್ಲಿ ಪೂರ್ಣಗೊಳಿಸುತ್ತೇನೆ ಎಂದರು.

ಬಳ್ಳಾರಿ ನಗರಕ್ಕೆ ತುಂಗಭದ್ರಾದಿಂದ ನೀರಿನ ಪೈಪ್‌ಲೈನ್ ಕಾಮಗಾರಿಗೆ ₹1200 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಪ್ರಾರಂಭಿಕ ₹270 ಕೋಟಿಯಲ್ಲಿ ನಗರದಲ್ಲಿ ಟ್ಯಾಂಕ್ ನಿರ್ಮಾಣ ಮನೆ-ಮನೆಗೆ ಪೈಪ್‌ಲೈನ್ ಅಳವಡಿಕೆ ಯೋಜನೆ ರೂಪಿಸಿಕೊಂಡಿದ್ದೇವೆ. ಬಳ್ಳಾರಿ ಜಿಲ್ಲಾಸ್ಪತ್ರೆ ಅಭಿವೃದ್ಧಿಗೆ ₹300 ಕೋಟಿ ನೀಡಲಾಗಿದೆ ಎಂದು ಶಾಸಕ ಭರತ್ ರೆಡ್ಡಿ ವಿವರಿಸಿದರು.

ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಮಾತನಾಡಿದರು.

ಪೌರ ಕಾರ್ಮಿಕರು ನಿವೃತ್ತರಾಗುವ ಸಮಯಲ್ಲಿ ಅವರಿಗೆ ಕೊನೆಯಲ್ಲಿ ನೀಡುವ ಪಿಂಚಣಿ ಇನ್ನಿತರೆ ಸೌಲಭ್ಯಗಳನ್ನು ಬೀಳ್ಕೊಡುವ ಸಮಯದಲ್ಲಿ ಅವರಿಗೆ ಚೆಕ್‌ಗಳು ನೀಡುವುದರಿಂದ ಅವರು ಕಚೇರಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗುವುದಿಲ್ಲ. ಈ ನಿಯಮವನ್ನು ಬಳ್ಳಾರಿ ನಗರಕ್ಕೂ ಜಾರಿಗೊಳಿಸಲು ಆಯುಕ್ತರ ಜೊತೆ ಚರ್ಚಿಸಿದ್ದೇನೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಬಳ್ಳಾರಿ ಮಹಾನಗರ ಪಾಲಿಕೆಯಿಂದ ಕಾರ್ಮಿಕರಿಗೆ ಆಯೋಜಿಸಿದ್ದ ಕ್ರಿಕೆಟ್, ಮ್ಯೂಸಿಕಲ್ ಚೇರ್ ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಉಪಮೇಯರ್ ಡಿ.ಸುಕುಂ, ಸಫಾಯಿ ಕರ್ಮಚಾರಿ ನಿಗಮದ ಸದಸ್ಯ ಕಂದಕೂರು ರಾಮುಡು, ಮಾಜಿ ಮೇಯರ್ ರಾಜೇಶ್ವರಿ, ಉಪ ಆಯುಕ್ತ ನಂದೀಶ್, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪದ್ಮರೋಜ ಸೇರಿದಂತೆ ಪಾಲಿಕೆಯ ಸದಸ್ಯರು, ಅಧಿಕಾರಿ, ಸಿಬ್ಬಂದಿ, ಪೌರಕಾರ್ಮಿಕರು ಉಪಸ್ಥಿತರಿದ್ದರು.

PREV

Recommended Stories

ಪಾಲಿಕೆಗಳ ಚುನಾವಣೆ ಮುಗಿವವರೆಗೆ ಬೆಂಗಳೂರಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ : ಕೇಂದ್ರ ಆಯುಕ್ತರಿಗೆ ಪತ್ರ
ಡ್ರಾಪ್‌ ನೆಪದಲ್ಲಿ ಗುತ್ತಿಗೆದಾರನ ದರೋಡೆ ಮಾಡಿದ್ದ ನಾಲ್ವರ ಬಂಧನ