ಶಿಥಿಲಾವಸ್ಥೆಯಲ್ಲಿರುವ ರಸ್ತೆ, ಸೇತುವೆಗಳ ದುರಸ್ತಿಗೆ ಕ್ರಮ: ಕೃಷಿ ಸಚಿವ ಚಲುವರಾಯಸ್ವಾಮಿ

KannadaprabhaNewsNetwork |  
Published : Nov 05, 2024, 12:36 AM IST
4ಕೆಎಂಎನ್ ಡಿ27 | Kannada Prabha

ಸಾರಾಂಶ

ನಾಗಮಂಗಲ ತಾಲೂಕಿನ ಹಲವು ಭಾಗಗಳಲ್ಲಿ ಶಿಥಿಲಗೊಂಡಿದ್ದ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ರಸ್ತೆಗಳನ್ನು ಒಂದೇ ಬಾರಿಗೆ ಅಭಿವೃದ್ಧಿ ಪಡಿಸುವುದು ಕಷ್ಟವಾಗುತ್ತದೆ. ಮುಂದಿನ ಎರಡು ವರ್ಷದಲ್ಲಿ ಬಹುತೇಕ ಹಳ್ಳಿಗಳ ರಸ್ತೆ ಮತ್ತು ಸೇತುವೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಗ್ರಾಮೀಣ ಪ್ರದೇಶದಲ್ಲಿ ಶಿಥಿಲಾವಸ್ಥೆಯಲ್ಲಿರುವ ರಸ್ತೆ ಹಾಗೂ ಸೇತುವೆಗಳ ದುರಸ್ತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ದೇವಲಾಪುರ ಹೋಬಳಿಯ ಕೊಂಬಿನಕೊಪ್ಪಲು ಮತ್ತು ತೂಬಿನಕೆರೆ ಗ್ರಾಮದ ನಡುವೆ ಹಾಯ್ದುಹೋಗಿರುವ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ಸೋಮವಾರ ಸ್ಥಳಕ್ಕೆ ಭೇಟಿಕೊಟ್ಟು ವೀಕ್ಷಣೆ ಮಾಡಿದ ಬಳಿಕ ಮಾತನಾಡಿ, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ರಸ್ತೆ ಹಾಗೂ ಸೇತುವೆಗಳು ಹಾಳಾಗಿರುವ ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಹಾಗೂ ವಾಹನಗಳ ಓಡಾಟಕ್ಕೆ ಬಹಳಷ್ಟು ತೊಂದರೆಯಾಗುತ್ತಿದೆ ಎಂದರು.

ತಾಲೂಕಿನ ಹಲವು ಭಾಗಗಳಲ್ಲಿ ಶಿಥಿಲಗೊಂಡಿದ್ದ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ರಸ್ತೆಗಳನ್ನು ಒಂದೇ ಬಾರಿಗೆ ಅಭಿವೃದ್ಧಿ ಪಡಿಸುವುದು ಕಷ್ಟವಾಗುತ್ತದೆ. ಮುಂದಿನ ಎರಡು ವರ್ಷದಲ್ಲಿ ಬಹುತೇಕ ಹಳ್ಳಿಗಳ ರಸ್ತೆ ಮತ್ತು ಸೇತುವೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಕೊಂಬಿನಕೊಪ್ಪಲು ಮತ್ತು ತೂಬಿನಕೆರೆ ಎರಡು ಗ್ರಾಮಗಳ ನಡುವೆ ಹಾಯ್ದುಹೋಗಿರುವ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಈ ಸೇತುವೆ ಸಂಪೂರ್ಣವಾಗಿ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಈ ಜಾಗದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದರು.

ತಾಲೂಕಿನಲ್ಲಿ ನಡೆಯುತ್ತಿರುವ ರಸ್ತೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಕಾಮಗಾರಿ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರ ವಿರುದ್ಧ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದಕ್ಕೂ ಮುನ್ನ ತಾಲೂಕಿನ ಬಳ್ಳೇಕೆರೆ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀಬಸವೇಶ್ವರಸ್ವಾಮಿ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು, ಹಳ್ಳಿಗಳಲ್ಲಿ ನಡೆಯುವ ಇಂತಹ ಧಾರ್ಮಿಕ ಕಾರ್ಯಗಳೂ ಸೇರಿದಂತೆ ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ಊರಿನ ಜನರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಶಾಂತಿ ನೆಮ್ಮದಿಯ ಬದುಕು ನಡೆಸಬೇಕು ಎಂದರು.

ನಾಡಿನಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು ಉತ್ತಮ ಫಸಲಿನೊಂದಿಗೆ ರೈತರ ಬದುಕು ಹಸನಾಗಲಿ ಎಂದು ಶುಭಹಾರೈಸಿದರು.

ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಅಪ್ಪಾಜಿಗೌಡ, ತಹಸೀಲ್ದಾರ್ ಜಿ.ಆದರ್ಶ, ಮನ್ಮುಲ್ ಮಾಜಿ ನಿರ್ದೇಶಕ ಡಿ.ಟಿ.ಕೃಷ್ಣೇಗೌಡ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ತಮ್ಮಣ್ಣಗೌಡ, ಮುಖಂಡ ದೇವಲಾಪುರ ಸುರೇಶ್ ಸೇರಿದಂತೆ ಹಲವರು ಇದ್ದರು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ