ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಸಕ್ತ ಸಾಲಿನ ತೃತೀಯ ತ್ರೈಮಾಸಿಕ ಜಿಲ್ಲಾ ಸಮಾಲೋಚನಾ ಸಮಿತಿ (DCC) ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (DLRC) ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಕಷ್ಟದಲ್ಲಿರುವ ರೈತರಿಂದ ಸಾಲ ವಸೂಲಾತಿಗೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹೇರುವುದು ಅಥವಾ ತಕ್ಷಣ ವಸೂಲಾತಿಗೆ ಮುಂದಾಗುವುದು ಸೂಕ್ತವಲ್ಲ. ರೈತರಿಗೆ ಹಂತ ಹಂತವಾಗಿ ಸಾಲ ಮರುಪಾವತಿಸಲು ಅಗತ್ಯ ಕಾಲಾವಕಾಶ ನೀಡುವುದರ ಜೊತೆಗೆ, ಮುಂದಿನ ಬೆಳೆಗೆ ಅನುಕೂಲವಾಗುವಂತೆ ಬೆಳೆ ಸಾಲ ಮಂಜೂರಾತಿಗೂ ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು ಎಂದು ಸೂಚನೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಬ್ಯಾಂಕ್ ಅಧಿಕಾರಿಗಳು ವಿಳಂಬವಿಲ್ಲದೆ ಸಮರ್ಪಕವಾಗಿ ಒದಗಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದ್ದಾಗಿದೆ. ಆರ್ಥಿಕವಾಗಿ ಹಿಂದುಳಿದವರು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸಿ ಬ್ಯಾಂಕ್ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.ರೈತರು ಹಾಗೂ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಅಧಿಕಾರಿಗಳು ಯಾವುದೇ ರೀತಿಯ ಹಿಂದೇಟು ಹಾಕದೆ ಅರ್ಹ ಫಲಾನುಭವಿಗಳಿಗೆ ಆದ್ಯತೆ ಮೇಲೆ ಸಾಲ ಮಂಜೂರು ಮಾಡಬೇಕು. ಗ್ರಾಮೀಣ ಭಾಗದ ರೈತರ ಕೃಷಿ ಚಟುವಟಿಕೆಗಳು ಹಾಗೂ ಜನರ ಆರ್ಥಿಕ ಅಗತ್ಯಗಳಿಗೆ ಅನುಗುಣವಾಗಿ ಸಮಗ್ರ ಸಮೀಕ್ಷೆ ನಡೆಸಿ, ಅವಶ್ಯಕತೆ ಇರುವ ಪ್ರದೇಶಗಳಲ್ಲಿ ಹೊಸ ಬ್ಯಾಂಕ್ ಶಾಖೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯ ಆದ್ಯತೆ ನೀಡುವುದರೊಂದಿಗೆ ಸಿಬ್ಬಂದಿಗಳು ಗ್ರಾಹಕರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು.
ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ:
ಬ್ಯಾಂಕ್‌ಗಳಲ್ಲಿ ಗ್ರಾಹಕರೊಂದಿಗೆ ಸಿಬ್ಬಂದಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿಯೇ ವ್ಯವಹರಿಸಬೇಕು. ಭಾಷೆಯ ಕಾರಣದಿಂದ ಗ್ರಾಹಕರಿಗೆ ತೊಂದರೆ ಅಥವಾ ಸಂವಹನದ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳು ಸುಲಭವಾಗಿ ದೊರೆಯುವಂತೆ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಎಲ್ಲ ಬ್ಯಾಂಕ್ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ‘ಹಣಕಾಸು ಯೋಜನೆ ಸ್ಯಾಚ್ಯುರೇಶನ್ ಅಭಿಯಾನ’ ಹಾಗೂ ‘ಪ್ರಧಾನ ಮಂತ್ರಿ ಫಸಲ್ (ಬೆಳೆ) ಬಿಮಾ ಯೋಜನೆ’ಯ ಪ್ರಚಾರ ಪತ್ರಗಳನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್, ಜಿಪಂ ಸಿಇಒ ರಾಹುಲ್ ಶಿಂಧೆ ಬಿಡುಗಡೆಗೊಳಿಸಿದರು.