ವಿಶೇಷ ಮತದಾರರ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿರುವ ಪಕ್ಷದ ಬಿಎಲ್‌ಎ-1, ಬಿಎಲ್‌ಎ-2 ಹಾಗೂ ತಂಡದ ಎಲ್ಲ ಸದಸ್ಯರ ಸೇವೆ ಶ್ಲಾಘನೀಯವಾಗಿದೆ.
ಕನ್ನಡಪ್ರಭ ವಾರ್ತೆ ಕಾರವಾರ
ವಿಶೇಷ ಮತದಾರರ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿರುವ ಪಕ್ಷದ ಬಿಎಲ್‌ಎ-1, ಬಿಎಲ್‌ಎ-2 ಹಾಗೂ ತಂಡದ ಎಲ್ಲ ಸದಸ್ಯರ ಸೇವೆ ಶ್ಲಾಘನೀಯವಾಗಿದ್ದು, ಇದೇ ಉತ್ಸಾಹವನ್ನು ಮುಂದುವರಿಸಿಕೊಂಡು ಪಕ್ಷದ ಸಂಘಟನೆ ಮತ್ತು ಎಸ್‌ಐಆರ್ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಕರೆ ನೀಡಿದರು.
ಕಾರವಾರ ನಗರದ ಮುರಳೀಧರ ಮಠದ ಇಂದಿರಾಕಾಂತ ಸಭಾಭವನದಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಆಯೋಜಿಸಿದ್ದ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಎಸ್‌ಐಆರ್ ಕಾರ್ಯ ಇನ್ನೂ ಮುಂದುವರಿಯುತ್ತಿರುವುದರಿಂದ ಇದೇ ಬದ್ಧತೆಯೊಂದಿಗೆ ಕೆಲಸ ಮುಂದುವರಿಸಬೇಕು ಎಂದು ಸೂಚಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ರೂಪಾಲಿ ನಾಯ್ಕ, ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾದರೂ ಅದು ಎಲ್ಲರಿಗೂ ನೋವುಂಟುಮಾಡುತ್ತದೆ. ವಿದ್ಯಾರ್ಥಿಗಳ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಎಂದು ಹೇಳಿದರು. ಕೆಲ ರಾಜಕೀಯ ಪಕ್ಷಗಳು ವಿದ್ಯಾರ್ಥಿಗಳನ್ನು ದಾರಿತಪ್ಪಿಸುವ ಪ್ರಯತ್ನ ನಡೆಸುತ್ತಿವೆ ಎಂದು ಆರೋಪಿಸಿದರು.
ಭಾರತೀಯ ಜನತಾ ಪಕ್ಷದ ಬಲ ಅದರ ಸಂಘಟನೆ ಮತ್ತು ಕಾರ್ಯಕರ್ತರಲ್ಲಿದೆ. ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಸಂಜಯ ಸಾಳುಂಕೆ ಮತ್ತು ಗಜಾನನ ಗುನಗ, ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ, ನಗರಸಭೆ ಮಾಜಿ ಅಧ್ಯಕ್ಷ ರವಿರಾಜ ಅಂಕೋಲೆಕರ, ಬಿಎಲ್‌ಎ-1 ರಾಘವೇಂದ್ರ ಭಟ್, ನಗರ ಪ್ರಭಾರಿ ರಾಜು ಭಂಡಾರಿ, ಸುನೀಲ ಸೋನಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.