ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಈ ಬಾರಿ ಹಿರಿಯ ಚಿತ್ರನಟಿ ಉಮಾಶ್ರೀ, ಉದ್ಯಮಿ ಎಸ್.ಕೆ. ಮೋದಿ ಹಾಗೂ ಹೂವಿನಹಡಗಲಿ ತಾಲೂಕು ನಾಗತಿ ಬಸಾಪುರದ ಚಂದ್ರಮೌಳೇಶ್ವರ ಶಿವಾಚಾರ್ಯರಿಗೆ ತನ್ನ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದ ವಿವಿ ಕುಲಪತಿ ಪ್ರೊ. ಎಂ. ಮುನಿರಾಜು, ಗೌರವ ಡಾಕ್ಟರೇಟ್ ಪದವಿಗೆ ಏಳು ಜನರಿಂದ ಅರ್ಜಿಗಳು ಬಂದಿದ್ದವು. ಈ ಪೈಕಿ ನೂರಾರು ನಾಟಕಗಳು, 460ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ರಂಗಭೂಮಿ ಕಲಾವಿದೆ ಹಾಗೂ ಚಿತ್ರನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಉದ್ಯಮಿಯಾಗಿದ್ದುಕೊಂಡು ಅನೇಕ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಬಳ್ಳಾರಿಯ ಎಸ್.ಕೆ. ಮೋದಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ನಾಗತಿ ಬಸಾಪುರ ಗ್ರಾಮದ ಚಂದ್ರಮೌಳೇಶ್ವರ ಶಿವಾಚಾರ್ಯರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.ಇಲ್ಲಿನ ಬಯಲು ರಂಗಮಂದಿರದಲ್ಲಿ ಸೆ.6ರಂದು ಹಮ್ಮಿಕೊಂಡಿರುವ 12ನೇ ಘಟಿಕೋತ್ಸವ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ, ಧಾರವಾಡ ಐಐಟಿಯ ಹಿರಿಯ ವಿಜ್ಞಾನಿ ಪ್ರೊ. ಎಸ್.ಎಂ. ಶಿವಪ್ರಸಾದ ಉಪಸ್ಥಿತರಿರುವರು ಎಂದು ಕುಲಪತಿ ತಿಳಿಸಿದರು.
ಕುಲಸಚಿವರಾದ ಎಸ್.ಎನ್. ರುದ್ರೇಶ ಹಾಗೂ ಪ್ರೊ. ರಮೇಶ ಓ. ಓಲೇಕಾರ ಮಾತನಾಡಿ, ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕ ಮುಡಿಗೇರಿಸಿಕೊಳ್ಳಲಿದ್ದಾರೆ. ವಿವಿಧ ವಿಭಾಗಗಳ ಒಟ್ಟು 36 ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಎಲ್ಲ ವಿಭಾಗಗಳ ಸ್ನಾತಕ ಪದವಿಯ 56 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯ 69 ಸೇರಿದಂತೆ ಒಟ್ಟು 125 ವಿದ್ಯಾರ್ಥಿಗಳು ರ್‍ಯಾಂಕ್ ಪ್ರಮಾಣ ಪತ್ರ ಪಡೆಯಲಿದ್ದಾರೆ ಎಂದು ತಿಳಿಸಿದರು.