ಗೃಹಲಕ್ಷ್ಮೀ ತಾಂತ್ರಿಕ ಅಡಚಣೆ ನಿವಾರಿಸಲು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

KannadaprabhaNewsNetwork |  
Published : Dec 28, 2023, 01:45 AM IST
 ಗೃಹ ಲಕ್ಷ್ಮೀ ಯೋಜನೆಯ ಅನುಷ್ಠಾನದ ವಿಶೇಷ ಶಿಬಿರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಹಿಳೆಯರ ಸಮಸ್ಯೆ ಆಲಿಸಿದರು | Kannada Prabha

ಸಾರಾಂಶ

ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಗೃಹಲಕ್ಷ್ಮೀ ಅದಾಲತ್‍ಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗೃಹಲಕ್ಷ್ಮೀ ಯೋಜನೆಯ ಯಾವುದೇ ಫಲಾನುಭವಿಗಳೂ ಸಹ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಬೆಳಗಾವಿ ತಾಲೂಕಿನ ಹಲಗಾದಲ್ಲಿ ಬುಧವಾರ ಗೃಹಲಕ್ಷ್ಮೀ ಅದಾಲತ್‍ಗೆ ಚಾಲನೆ ನೀಡಿ ಅವರು ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಡಿ.29ರವರೆಗೆ ವಿಶೇಷ ಶಿಬಿರಗಳು ರಾಜ್ಯಾದ್ಯಂತ ನಡೆಯಲಿವೆ ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನದಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಫಲಾನುಭವಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಕಚೇರಿಗೆ ತೆರಳಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 11 ಲಕ್ಷ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿದ್ದಾರೆ. ತಿಂಗಳಿಗೆ ₹ 202 ಕೋಟಿ ಹಣವನ್ನು ನೀಡಲಾಗುತ್ತಿದೆ. ಹಲಗಾ ಗ್ರಾಮವೊಂದರಲ್ಲಿಯೇ 1600 ಫಲಾನುಭವಿಗಳಿದ್ದಾರೆ. ಹಲಗಾ ಗ್ರಾಮದ ಕೆಲ ಫಲಾನುಭವಿಗಳು ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಕೆಲವರಿಗೆ ಬ್ಯಾಂಕ್ ಖಾತೆಯ ಸಮಸ್ಯೆ ಇದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ, ಇ-ಕೆವೈಸಿ ಆಗಿಲ್ಲ, ಹೀಗೆ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಅವರಿಗೆ ಹಣ ಜಮಾ ಆಗಿಲ್ಲ. ವಿಶೇಷ ಶಿಬಿರದಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಲವು ಫಲಾನುಭವಿಗಳನ್ನು ಸ್ವತಃ ಭೇಟಿಯಾಗಿ ಸಮಸ್ಯೆ ಆಲಿಸಿದರು. ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ರೇವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ