ಕಾಮಗಾರಿ ಕಳಪೆಯಾದಲ್ಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಿ: ಕಾಗೇರಿ

KannadaprabhaNewsNetwork |  
Published : Oct 16, 2025, 02:01 AM IST
ಕಾಗೇರಿ ಸಭೆ ನಡೆಸಿದರು  | Kannada Prabha

ಸಾರಾಂಶ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಜಿಲ್ಲೆಗೆ ಶಾಪವಾಗಿ ಪರಿಣಮಿಸಿವೆ, ಕಾಮಗಾರಿ ಆರಂಭಗೊಂಡು ಇಷ್ಟು ವರ್ಷಗಳು ಕಳೆದರೂ ಇನ್ನೂ ಸಂಪೂರ್ಣವಾಗದೇ ಇದ್ದು, ರಸ್ತೆ ಅಪಘಾತಗಳಿಂದ ಜನರು ಸಾವಿಗೀಡಾಗುತ್ತಿದ್ದಾರೆ.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸಂಸದಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಕಂಡುಬಂದಲ್ಲಿ ಮತ್ತು ಕಾಮಗಾರಿಯಲ್ಲಿ ನಿರ್ಲಕ್ಷ್ಯತನ ತೋರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಮತ್ತು ಈ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದವರಿಂದ ಸಂಬಂಧಂಪಟ್ಟ ಅಧಿಕಾರಿಗಳು ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಮಾಡಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಜಿಲ್ಲೆಗೆ ಶಾಪವಾಗಿ ಪರಿಣಮಿಸಿವೆ, ಕಾಮಗಾರಿ ಆರಂಭಗೊಂಡು ಇಷ್ಟು ವರ್ಷಗಳು ಕಳೆದರೂ ಇನ್ನೂ ಸಂಪೂರ್ಣವಾಗದೇ ಇದ್ದು, ರಸ್ತೆ ಅಪಘಾತಗಳಿಂದ ಜನರು ಸಾವಿಗೀಡಾಗುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಾರ್ವಜನಿಕರಿಂದ ನಿರಂತರ ಟೀಕೆ ಎದುರಿಸುವಂತಾಗಿದೆ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಂಸದರು, ಕಾಶ್ಮೀರದ ಚಿನಾಬ್ ನಂತಹ ದುರ್ಗಮ ಪ್ರದೇಶದಲ್ಲಿ ವಿಶ್ವದ ಅತ್ಯಂತ ಎತ್ತರದ ರೈಲ್ವೆ ಸೇತುವೆಯನ್ನು ನಿಗದಿತ ಅವಧಿಯೊಳಗೆ ಮುಕ್ತಾಯಗೊಳಿಸಲಾಗುತ್ತಿದೆ. ಆದರೆ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಕಾಲಮಿತಿ ಮೀರಿದರೂ ಮುಕ್ತಾಯಗೊಳ್ಳದೇ ಇರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯ ಬಹುತೇಕ ರಸ್ತೆಗಳು ಗುಂಡಿಮಯವಾಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ವ್ಯತ್ಯಯವಾಗಿವೆ, ರಸ್ತೆ ಗುಂಡಿಗಳಿಗೆ ಕೇವಲ ಜಲ್ಲಿಕಲ್ಲು ಹಾಕಿ ಬಿಡದೇ ರಸ್ತೆಗಳನ್ನು ಸರಿಪಡಿಸುವಂತೆ ಸೂಚಿಸಿದ ಅವರು, ಜಿಲ್ಲೆಯ ರಸ್ತೆಗಳ ಬಗ್ಗೆ ಇರುವ ಜನಸಾಮಾನ್ಯರ ಅಭಿಪ್ರಾಯವು ಆಡಳಿತ ವರ್ಗಕ್ಕೆ ಕಪ್ಪು ಚುಕ್ಕೆಯಾಗಿದೆ, ಇದನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ರಸ್ತೆಗಳ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜನರ ಜೀವದ ಜತೆ ಆಟವಾಡದೇ ರಸ್ತೆ ಗುಂಡಿಗಳನ್ನು ಮುಚ್ಚುವ, ರಸ್ತೆಯ ತಿರುವುಗಳಲ್ಲಿ ಸೂಚನಾ ಫಲಕ, ರಿಪ್ಲೆಕ್ಟರ್ ಅಳವಡಿಸುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಅರಬೈಲ್ ಘಾಟ್‌ನ ತಿರುವಿನಲ್ಲಿ ಪದೇ ಪದೇ ಅಪಘಾತವಾಗುತ್ತಿದ್ದು, ಈ ಕುರಿತು ಗಮನ ಹರಿಸದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಅಪಘಾತ ವಲಯವನ್ನು ಬಿಟ್ಟು ಬೇರೆ ಕಡೆ ದುರಸ್ತಿ ಕಾರ್ಯ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ ಸಂಸದರು, ಅಪಘಾತವಾಗುವ ಸ್ಥಳಗಳಲ್ಲಿನ ರಸ್ತೆ ತಿರುವನ್ನು ಅಗಲೀಕರಣ ಮಾಡುವಂತೆ ಹಾಗೂ ಸೂಚನಾ ಫಲಕ ಮತ್ತು ರಿಪ್ಲೆಕ್ಟರ್‌ಗಳನ್ನು ಅಳವಡಿಸುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಾ.ಹೆ. 66ರ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಚಿಕ್ಕ ಪುಟ್ಟ ಸಮಸ್ಯೆಗಳಿದ್ದರೆ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು ಎಂದರು.

ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಅಪಘಾತಗಳಿಗೆ ಕಾರಣಗಳ ಕುರಿತ ವರದಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ರಸ್ತೆ ಅಪಘಾತದ ಸಂದರ್ಭದಲ್ಲಿ ಗೋಲ್ಡನ್ ಅವರ್‌ನಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳುವ ಮೂಲಕ ಜೀವಹಾನಿಯಾಗದಂತೆ ನೋಡಿಕೊಳ್ಳಿ ಹಾಗೂ ಹೆದ್ದಾರಿಗಳಲ್ಲಿ ಬಿಡಾಡಿ ದನ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ
ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!