ಕನ್ನಡಪ್ರಭ ವಾರ್ತೆ ರಾಮನಗರ
ಶಕ್ತಿ ಯೋಜನೆಯಡಿ ಹಾರೋಹಳ್ಳಿ ಹಾಗೂ ಸಾತನೂರಿನಿಂದ - ಬೆಂಗಳೂರು ಹಾಗೂ ಮಾಗಡಿಯಿಂದ ಕುಣಿಗಲ್‌ಗೆ ಬೆಳಿಗ್ಗೆ 7.30 ರಿಂದ 10ರ ವರೆಗೆ ಹಾಗೂ ಸಂಜೆ ವೇಳೆಯಲ್ಲಿ ಹೆಚ್ಚುವರಿ ಬಸ್ಸುಗಳನ್ನು ಓಡಿಸುವ ಮೂಲಕ ಆ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೆ.ಎಸ್.ಆರ್.ಟಿ.ಸಿ ರಾಮನಗರ ವಿಭಾಗದ ವಿಭಾಗಿಯ ನಿಯಂತ್ರಣ ಅಧಿಕಾರಿಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ. ರಾಜು ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಮಾರ್ಗಗಳಲ್ಲಿ ಬೆಳಗ್ಗೆ 7.30 ರಿಂದ 10 ಗಂಟೆಯವರೆಗೆ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಂಚರಿಸುತ್ತಾರೆ. ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಈ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಜುಲೈ ಮಾಹೆಯ ಸಹಾಯಧನವನ್ನು ಈಗಾಗಲೇ ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮಾಡಲಾಗಿದ್ದು, ಇನ್ನೆರಡು ದಿನಗಳಲ್ಲಿ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುವುದು, ಉಳಿದ ಎರಡು ತಿಂಗಳ ಮೊತ್ತವನ್ನು ಕೂಡಲೇ ಪಾವತಿಸುವ ಕ್ರಮ ವಹಿಸಲಾಗಿದೆ ಎಂದರು.ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3.29.520 ಮನೆಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, 2025ರ ಸೆಪ್ಟಂಬರ್ ಅಂತ್ಯದ ವರೆಗೆ ಒಟ್ಟು 13.87 ಕೋಟಿ ರು.ಗಳ ಮೊತ್ತವನ್ನು ಪಾವತಿಸಲಾಗಿದೆ. ಈ ಯೋಜನೆ ಪ್ರಾರಂಭವಾದಾಗಿನಿಂದ ಜಿಲ್ಲೆಯಲ್ಲಿ ಒಟ್ಟಾರೆ 306 ಕೋಟಿ 77 ಲಕ್ಷ ರು.ಗಳ ವಿದ್ಯುತ್ ವೆಚ್ಚವನ್ನು ಯೋಜನೆಯಡಿ ಭರಿಸಲಾಗಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ದೋಷಗಳು, ಲೋಪಗಳು ಕಂಡುಬಂದಿಲ್ಲ ಎಂದು ಹೇಳಿದರು.
ಇನ್ನು ಮುಂದೆ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಜತೆಗೆ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಇರುವ ಇಂದಿರಾ ಆಹಾರ ಕಿಟ್ ನೀಡುವ ಸರ್ಕಾರದ ಪ್ರಸ್ತಾವ ನಿಜಕ್ಕೂ ಉತ್ತಮವಾಗಿದ್ದು ಇದು ನವೆಂಬರ್ ಅಥವಾ ಡಿಸೆಂಬರ್‌ನಿಂದ ಜಾರಿಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿಸಿದರು.ಪಡಿತರ ಅಕ್ಕಿಯನ್ನು ಕಳ್ಳ ಸಾಗಣೆ ಮಾಡುವ ಪ್ರಸಂಗಗಳು ಕಂಡುಬಂದರೆ ಲಾರಿ ಹಾಗೂ ಸಂಬಂಧಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಬೇಕು, ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಮುಂದಿನ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾಹಿತಿ ನೀಡುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋನ್ ಜೈನ್, ಉಪಕಾರ್ಯದರ್ಶಿ ಧನರಾಜ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಕೆ.ಎಂ. ಮಹದೇವ್., ಎಸ್.ಸಿ. ಶೇಖರ್, ಎಚ್.ಆರ್.ಶಿವಪ್ರಸಾದ್ , ಸಿದ್ದೇಗೌಡ, ಶಂಕರ್ ಹಾಗೂ ರಾಮನಗರ ತಾಲೂಕು ಅಧ್ಯಕ್ಷ ವಿ.ಎಚ್. ರಾಜು, ಮಾಗಡಿ ತಾಲೂಕು ಅಧ್ಯಕ್ಷ ಕೆ.ಆರ್. ಶಿವಣ್ಣ, ಚನ್ನಪಟ್ಟಣ ತಾಲೂಕು ಅಧ್ಯಕ್ಷ ರಂಗನಾಥ, ಕನಕಪುರ ತಾಲೂಕು ಅಧ್ಯಕ್ಷ ಕೆ.ಎನ್. ದಿಲೀಪ್, ಹಾರೋಹಳ್ಳಿ ತಾಲೂಕು ಅಧ್ಯಕ್ಷ ಕೆ.ಟಿ. ಶಿವಮಾದಯ್ಯ ಇದ್ದರು.14ಕೆಆರ್ ಎಂಎನ್ 6.ಜೆಪಿಜಿರಾಮನಗರದ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಮಂಗಳವಾರ ಕೆ.ರಾಜುರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆ ನಡೆಯಿತು.