ಯುವಜನರು ಮೈ ಭಾರತ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಅಪರ ಜಿಲ್ಲಾಧಿಕಾರಿ ಕರೆ

KannadaprabhaNewsNetwork |  
Published : Aug 26, 2026, 01:15 AM IST
25ಕೆಆರ್ ಎಂಎನ್ 1.ಜೆಪಿಜಿನಗರದ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಚಂದ್ರಯ್ಯರವರ ಅಧ್ಯಕ್ಷತೆಯಲ್ಲಿ  ಮೈ ಭಾರತ್ ಪೋರ್ಟಲ್‌ನ ಕಾರ್ಯಾಚರಣೆ ಕುರಿತು ಜಿಲ್ಲಾ ಸಲಹಾ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ ಪೋರ್ಟಲ್ ಎಂಬುದು ಯುವ ಜನರನ್ನು ಸ್ವಯಂ ಸೇವಾ ಅವಕಾಶಗಳನ್ನು, ರಾಷ್ಟ್ರ ನಿರ್ಮಾಣದ ಚಟುವಟಿಕೆಗಳು, ಕೌಶಲ್ಯಾಭಿವೃದ್ಧಿ, ನಾಯಕತ್ವ ಕಾರ್ಯಕ್ರಮಗಳನ್ನು ಮತ್ತು ವಿವಿಧ ಸರ್ಕಾರಿ ಯೋಜನೆಗಳೊಂದಿಗೆ ಸಂಪರ್ಕಿಸುವ ಮೂಲಕ ಸಬಲೀಕರಣಗೊಳಿಸಲು ಒಂದು ಏಕೀಕೃತ ಡಿಜಿಟಲ್ ವೇದಿಕೆಯಾಗಿ ಸ್ಥಾಪಿಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ರಾಮನಗರ

ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ವಿವಿಧ ಯುವ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುವುದರಿಂದ ಜಿಲ್ಲೆಯ ಯುವಜನರು ಮೈ ಭಾರತ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ತಿಳಿಸಿದರು.

ನಗರದ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈ ಭಾರತ್ ಪೋರ್ಟಲ್‌ನ ಕಾರ್ಯಾಚರಣೆ ಜಾರಿಗೊಳಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಮೊದಲ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ ಪೋರ್ಟಲ್ ಎಂಬುದು ಯುವ ಜನರನ್ನು ಸ್ವಯಂ ಸೇವಾ ಅವಕಾಶಗಳನ್ನು, ರಾಷ್ಟ್ರ ನಿರ್ಮಾಣದ ಚಟುವಟಿಕೆಗಳು, ಕೌಶಲ್ಯಾಭಿವೃದ್ಧಿ, ನಾಯಕತ್ವ ಕಾರ್ಯಕ್ರಮಗಳನ್ನು ಮತ್ತು ವಿವಿಧ ಸರ್ಕಾರಿ ಯೋಜನೆಗಳೊಂದಿಗೆ ಸಂಪರ್ಕಿಸುವ ಮೂಲಕ ಸಬಲೀಕರಣಗೊಳಿಸಲು ಒಂದು ಏಕೀಕೃತ ಡಿಜಿಟಲ್ ವೇದಿಕೆಯಾಗಿ ಸ್ಥಾಪಿಸಲಾಗಿದೆ ಎಂದರು.

ಯುವ ಸಬಲೀಕರಣದಿಂದ ರಾಷ್ಟ್ರದ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದೆ. ಎಲ್ಲಾ ಇಲಾಖೆಗಳು ಮೈ ಭಾರತ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವುದರಿಂದ ಯುವ ಜನರಿಗಾಗಿ ಹಮ್ಮಿಕೊಳ್ಳಲಾಗುವ ಇಲಾಖಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಯುವಜನರು ಭಾಗವಹಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಅದರಲ್ಲೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ, ಪದವಿ ಪೂರ್ವ, ಪದವಿ, ಉನ್ನತ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳು ಕಡ್ಡಾಯವಾಗಿ ಮೇರಾ ಯುವ ಭಾರತ್ (ಮೈ ಭಾರತ್) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಹಾಗೂ ಯುವ ಜನರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೈ ಭಾರತ್ ಪೋರ್ಟಲ್ https://share.google/FLXjzdJgPch5Fywxy ಮೂಲಕ ನೋಂದಾಯಿಸಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಯುವ ಜನತೆಯಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು, ಯುವಜನರಿಗೆ ಶಿಕ್ಷಣ, ಕೌಶಲ್ಯ, ಕ್ರೀಡೆ, ಸಾಂಸ್ಕೃತಿಕ ಹಾಗೂ ವೃತ್ತಿಪರ ತರಬೇತಿ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಹಾಗೂ ಕೇಂದ್ರ- ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಯುವಜನತೆಗೆ ತಲುಪಿಸಲು ಈ ಪೋರ್ಟಲ್ ಸಹಕಾರಿಯಾಗಲಿದೆ ಎಂದು ಚಂದ್ರಯ್ಯ ತಿಳಿಸಿದರು.

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್‌ನ ಬೆಂಗಳೂರು ದಕ್ಷಿಣ ಜಿಲ್ಲಾ ಯುವ ಅಧಿಕಾರಿ ಅರುಣಿಮಾ ಮಾತನಾಡಿ, ಯುವಜನರ ಆಂತರಿಕ ಸಾಮರ್ಥ್ಯವನ್ನು ಅಭಿವೃದ್ಧಿಗೊಳಿಸಲು ಹಾಗೂ ಅವರಿಗೆ ಆಸಕ್ತಿ ಇರುವ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸಿ, ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಅವಕಾಶ ಕಲ್ಪಿಸುವುದು ಮೇರಾ ಯುವ ಭಾರತ್‌ನ (ಮೈ ಭಾರತ್) ಉದ್ದೇಶವಾಗಿದೆ ಎಂದು ಹೇಳಿದರು.

ಈ ಜಿಲ್ಲೆಯಲ್ಲಿ ಇದುವರೆಗೂ 7,747 ಯುವ ಜನರು ಮಾತ್ರ ನೋಂದಾಯಿಸಿಕೊಂಡಿದ್ದಾರೆ. 15 ರಿಂದ 29 ವರ್ಷ ವಯಸ್ಸಿನ ಯುವ ಜನರು ಮೇರಾ ಯುವಭಾರತ್ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಸತೀಶ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಮಂಜುನಾಥ್, ಲೀಡ್ ಬ್ಯಾಂಕ್ ಮ್ಯಾನೇಜರ್ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ವರ್ಷದಿಂದ ಬಿಲ್‌ ಆಗಿಲ್ಲ: ಅಸಮಧಾನ
ಸಂಘಗಳ ಆರ್ಥಿಕ ಪ್ರಗತಿಗೆ ಸದಸ್ಯರು ಸಹಕರಿಸಿ