ಕನ್ನಡಪ್ರಭ : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಮಳೆ ಆಗಿರುವ ಹಿನ್ನೆಲೆ ವಿರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ.
ಕುಡಿಯುವ ನೀರಿನ ಅಭಾವ ಕಂಡು ಬಂದಿರುವ ಹಾಗೂ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯವಾಗಿ ಹತ್ತಿರದಲ್ಲಿರುವ ಹೆಚ್ಚು ನೀರು ಇಳುವರಿ ಹಾಗೂ ಗುಣಮಟ್ಟದ ಕೊಳವೆ ಬಾವಿಗಳನ್ನು ಗುರುತಿಸಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸುವಂತೆ ಸಲಹೆ ಮಾಡಿದರು.ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜು ದೊಡ್ಡಮನಿ ಅವರು ಈಗಾಗಲೇ ಜಾನುವಾರುಗಳಿಗೆ ಮೇವು ದಾಸ್ತಾನು ಇದ್ದು, 46 ವಾರಗಳ ಕಾಲ ಬರುವಷ್ಟು ಮೇವು ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು. ಕೊಡಗು ಜಿಲ್ಲೆಗೆ 2340 ಮೇವಿನ ಬೀಜದ ಕಿಟ್ಟು ವಿತರಿಸಲು ಹಂಚಿಕೆ ಆಗಿದ್ದು, ಶೀಘ್ರದಲ್ಲಿ ಮೇವಿನ ಬೀಜದ ಕಿಟ್ಟನ್ನು ವಿತರಿಸಲಾಗುತ್ತದೆ ಎಂದು ಡಾ.ಲಿಂಗರಾಜು ದೊಡ್ಡಮನಿ ಅವರು ವಿವರಿಸಿದರು.
ಮುಂಗಾರು ಸಂದರ್ಭ ಸರಿಯಾದ ಸಮಯದಲ್ಲಿ ಮಳೆಯಾಗದೆ ಮುಸುಕಿನ ಜೋಳ ಮತ್ತು ಭತ್ತ ಬೆಳೆ ಹಾನಿಯಾಗಿದ್ದು, ಸೋಮವಾರಪೇಟೆ ತಾಲೂಕಿನಲ್ಲಿ 159 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ, ವಿರಾಜಪೇಟೆ ತಾಲೂಕಿನಲ್ಲಿ 650 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ 1470 ಹೆಕ್ಟೇರ್ ಪ್ರದೇಶದಲ್ಲಿ ಒಟ್ಟು 2,279 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 1.93 ಕೋಟಿ ರೂ. ಇನ್‌ಫುಟ್ ಸಬ್ಸಿಡಿ ಬಿಡುಗಡೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಮಾಹಿತಿ ನೀಡಿದರು.ಜಲಜೀವನ್ ಮಿಷನ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಜಿಲ್ಲೆಯಲ್ಲಿ ಡಿಸೆಂಬರ್‌ವರೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ತೊಂದರೆಯಿಲ್ಲ ಎಂದು ಮಾಹಿತಿ ನೀಡಿದರು.
ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ಅವರು ಮಾಹಿತಿ ನೀಡಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.