ಸಮರ್ಪಕ ಬಿತ್ತನೆ ಬೀಜ ರಸಗೊಬ್ಬರ ವಿತರಣೆಯಾಗಲಿ

KannadaprabhaNewsNetwork |  
Published : May 24, 2024, 12:45 AM ISTUpdated : May 24, 2024, 12:46 AM IST
ಮುಖ್ಯಮಂತ್ರಿಗಳೊಂದಿನ ಸಂವಾದ ಕಾರ್ಯಕ್ರಮದಲ್ಲಿ ಡಿಸಿ,  ಸಿಇಓ ಮಾತನಾಡಿದರು.  | Kannada Prabha

ಸಾರಾಂಶ

ಮಳೆಗಾಲ ಆರಂಭಕ್ಕೆ ಇನ್ನೂ 15-20 ದಿನ ಉಳಿದಿವೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು

ಗದಗ: ಲೋಕಸಭೆ ಚುನಾವಣೆ ಮತದಾನ ಮುಕ್ತಾಯವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯಿಂದ ಸಡಿಲಿಕೆ ನೀಡಿರುವುದರಿಂದ ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಓಗೆ ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದರು. ಅವರು ಗುರುವಾರ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ ಕೃಷ್ಣಾ ದಿಂದ ನಡೆಸಿದ ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲ ಡಿಸಿ, ಜಿಪಂ ಸಿಇಓ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಎಲ್ಲಿಯೂ ಕೊರತೆಯಾಗದಂತೆ ನೋಡಬೇಕು. ರಾಜ್ಯದಲ್ಲಿ ದಾಸ್ತಾನು ಸಾಕಷ್ಟಿದೆ. ಆದರೆ ಜಿಲ್ಲಾ,ತಾಲೂಕಿಗೆ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು. ಇದಕ್ಕೆ ಸರಿಯಾಗಿ ಯೋಜನೆ ರೂಪಿಸಿ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಈ ಕುರಿತು ರೈತರಿಂದ ದೂರು ಬಾರದಂತೆ ನೋಡಿಕೊಳ್ಳಬೇಕು. ಹಾವೇರಿಯಲ್ಲಿ ಬಿತ್ತನೆ ಬೀಜಕ್ಕೆ ಜನ ಕ್ಯೂ ನಿಂತಿರುವುದು ಮಾಧ್ಯಮ ಮುಖಾಂತರ ತಿಳಿದು ಬಂದಿದೆ. ಈ ರೀತಿ ಆಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮಳೆಗಾಲ ಆರಂಭಕ್ಕೆ ಇನ್ನೂ 15-20 ದಿನ ಉಳಿದಿವೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು. ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕೆಂದ ಅವರು. ನೀರು ಪೂರೈಕೆ ಮುನ್ನ ಅದು ಕುಡಿಯಲು ಯೋಗ್ಯವಾಗಿದೆ ಎಂದು ಪರೀಕ್ಷಿಸಿ ಪೂರೈಸಬೇಕು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆಗಾರರಾಗುತ್ತಾರೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು. ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು, ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಮೇ ತಿಂಗಳಲ್ಲಿ ಬಿತ್ತನೆ ಗುರಿ 2.95 ಲಕ್ಷ ಹೆಕ್ಟೇರ್ ಪ್ರದೇಶ. ಸಾಧನೆಯಾಗಿರುವುದು 68 ಸಾವಿರ ಹೆಕ್ಟೇರ್ ಪ್ರದೇಶ ಇನ್ನೂ 13 ದಿನ ಬಾಕಿ ಇದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದರು.

ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ರಾಜ್ಯದಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳ ಸಂಖ್ಯೆ ಕಡೆಗೆ ಅಧಿಕಾರಿಗಳು ಗಮನಹರಿಸಬೇಕು. ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವಾಗಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಿರುವ ಕುರಿತು ಮನವರಿಕೆ ಅಗತ್ಯವಾಗಿದೆ ಎಂದರು.

ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕ ಇದೆ. ಬಿತ್ತನೆಗೆ ಎಲ್ಲ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರಾದ ಎನ್. ಚೆಲುವರಾಯಸ್ವಾಮಿ, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಶಿವಾನಂದ ಪಾಟೀಲ, ರಹೀಂ ಖಾನ್ ಪಾಲ್ಗೊಂಡಿದ್ದರು.

2-3 ದಿನಗಳಲ್ಲಿ ಪರಿಹಾರ: ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಮಾಹಿತಿ ನೀಡಿದ ಡಿಸಿ ವೈಶಾಲಿ ಎಂ.ಎಲ್. ಆಧಾರ್ ಸೀಡಿಂಗ್ ಮತ್ತಿತರ ಸಮಸ್ಯೆ ಕಾರಣ 22 ಸಾವಿರ ರೈತರಿಗೆ ಪರಿಹಾರ ಧನ ಬಾಕಿ ಇತ್ತು. ಇದರಲ್ಲಿ ಹಲವಾರು ಸಮಸ್ಯೆ ಬಗೆಹರಿಸಿದ್ದು, ಇನ್ನುಳಿದ ಸಮಸ್ಯೆಗಳನ್ನು ಮುಂದಿನ 2-3 ದಿನದಲ್ಲಿ ಬಗೆಹರಿಸಿ ಎಲ್ಲ ಅರ್ಹ ರೈತರಿಗೆ ಪರಿಹಾರ ವಿತರಣೆ ಮಾಡಲಾಗುವುದು, ಪರಿಹಾರ ವಿತರಣೆ ಮಾಡುವಾಗ ಪ್ರತಿಯೊಬ್ಬ ರೈತರ ಹೊಲದಲ್ಲಿಯೂ ಕ್ರಾಪ್ ಸರ್ವೇ ಲಿಂಕ್ ಮಾಡಲಾಗಿದೆ. 5591 ಫಲಾನುಭವಿಗಳ ಆಧಾರ ಮತ್ತು ಬ್ಯಾಂಕ್ ಖಾತೆ, ಫ್ರೂಟ್ಸ್ ಐಡಿಗಳಲ್ಲಿ ಹೆಸರಿನ ವ್ಯತ್ಯಾಸ ಮತ್ತು ಇತರೆ ಕಾರಣದಿಂದ ಪರಿಹಾರ ಜಮೆ ಆಗದೇ ಇರುವುಗಳನ್ನು ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. 2023 ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಗೆ 113778 ಫಲಾನುಭವಿಗಳಿಗೆ 1 ರಿಂದ 10 ಹಂತದವರೆಗೆ ₹ 110 ಕೋಟಿ ಬೆಳೆ ಹಾನಿ ಪರಿಹಾರಧನ ವಿತರಿಸಲಾಗಿದೆ ಎಂದು ವಿವರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ