ಜನರ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥ ಪಡಿಸಿಬೇಕು । ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮ
ಶಿರಾ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ರೈತರ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಅವುಗಳನ್ನು ಈ ಕೂಡಲೇ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸಲಾಗುವುದು ಎಂದು ಶಿರಾ ಶಾಸಕ ಹಾಗೂ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ಶಿರಾ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ರೈತರಿಗೆ ಸ್ಪಂದಿಸಬೇಕೆಂದು ತಾಕೀತು ಮಾಡಿದರು.ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ನಿವೇಶನಗಳ ಸಮಸ್ಯೆ ಜಾಸ್ತಿ ಇದೆ. ನಿವೇಶನ ರಹಿತರಿಗೆ ನಿವೇಶನ ನೀಡಲು ಹಿಂದಿನ ಅವಧಿಯಲ್ಲಿ ಸುಮಾರು 600 ಎಕರೆ ಜಾಗವನ್ನು ಗುರುತಿಸಿ ಮಂಜೂರು ಮಾಡಿಕೊಡಲಾಗಿತ್ತು. ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ ಕೂಡಲೇ ನಿವೇಶನ ನೀಡುವಲ್ಲಿ ಕ್ರಮ ವಹಿಸಬೇಕೆಂದು ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಮಾತನಾಡಿ, ಸರ್ಕಾರ ಮತ್ತು ಅಧಿಕಾರಿಗಳು ಮನೆ ಮನೆಗೆ ತೆರಳಿ ಅವರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲಿಯೇ ಆ ಸಮಸ್ಯೆಗಳಿಗೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂಬ ಉದ್ದೇಶದಿಂದ ಜನತಾ ದರ್ಶನ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ನ್ಯಾಯಾಲಯ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಪ್ರತಿ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸುವ ಮೂಲಕ ಆಯಾ ತಾಲೂಕಿನ ಜನರ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದರು.
ಅರ್ಹ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಕೆಐಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಸೋಮಪ್ಪ ಕಡಕೋಳ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಶಾರದಮ್ಮ, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣಪ್ಪ, ತಹಸೀಲ್ದಾರ್ ದತ್ತಾತ್ರೇಯ ಜೆ ಗದ, ನಗರಸಭೆ ಆಯುಕ್ತ ರುದ್ರೇಶ್, ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಅನಂತರಾಜು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ರೈತರಿಗೆ ಸರ್ಕಾರವೇ ಉದ್ಯೋಗ ನೀಡಲಿಶಿರಾದಲ್ಲಿ ಏರ್ಪಡಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದ ಜಯರಾಮಪ್ಪ ಎಂಬ ರೈತ, ರೈತರ ಮಕ್ಕಳಿಗೆ ಯಾರು ಹೆಣ್ಣು ಕೊಡುತ್ತಿಲ್ಲ. ರೈತ ಎಂಬ ಕಾರಣಕ್ಕೆ ಹೆಣ್ಣು ಕೊಡಲು ಹಿಂಜರಿಯುತ್ತಿದ್ದಾರೆ. ಆದ್ದರಿಂದ ಸರ್ಕಾರವೇ ನಮ್ಮ ಮಕ್ಕಳಿಗೆ ಉದ್ಯೋಗ ನೀಡಬೇಕು. ಆಗ ಹೆಣ್ಣು ಕೊಡುತ್ತಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಅರ್ಜಿ ಸಲ್ಲಿಸುವ ಮೂಲಕ ಗಮನ ಸೆಳೆದರು.