ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಆಡಳಿತಾತ್ಮಕ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಪ್ರಜಾಸೇವೆ ಅಭಿಯಾನದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಆಡಳಿತಾತ್ಮಕ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಪ್ರಜಾಸೇವೆ ಅಭಿಯಾನದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.
ತಾಲೂಕಿನ ಉಕ್ಕಲಿ ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಶನಿವಾರ ತಾಲೂಕಾಡಳಿತ ಹಮ್ಮಿಕೊಂಡಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರು ತಾಲೂಕು ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶ. ವಿಶೇಷವಾಗಿ ವೃದ್ಧರು, ಅಂಗವಿಕಲರು ಹಾಗೂ ವಿವಿಧ ಕಾರಣಗಳಿಂದ ಸರ್ಕಾರಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದವರಿಗೆ ಈ ಕಾರ್ಯಕ್ರಮ ಹೆಚ್ಚು ಅನುಕೂಲವಾಗಲಿದೆ. ಅಧಿಕಾರಿಗಳೇ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಪರಿಶೀಲಿಸಿ, ನಿಯಮಾನುಸಾರ ಅರ್ಹ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಿದ್ದಾರೆ ಎಂದರು.
ಸರ್ಕಾರಿ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಸರ್ಕಾರದ ಆಶಯ. ಗ್ರಾಮೀಣ ಪ್ರದೇಶದ ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ವೃದ್ದಾಪ್ಯ ವೇತನ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ, ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದು, ಅರ್ಜಿಗಳನ್ನು ಪರಿಶೀಲಿಸಿ ಕಾನೂನುಬದ್ಧವಾಗಿ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಅರ್ಹರಿಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಆಡಳಿತದ ಮೇಲಿನ ವಿಶ್ವಾಸವನ್ನು ಹೆಚ್ಚಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ತಾಲೂಕಿನಲ್ಲಿ ಕಾರ್ಯಕ್ರಮ ಯಶಸ್ವಿಯಾಗಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 44, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ 7, ಕೆ.ಎಸ್.ಆರ್.ಟಿ.ಸಿ.ಗೆ ಸಂಬಂಧಿಸಿದಂತೆ 1, ಹೆಸ್ಕಾಂಗೆ ಸಂಬಂಧಿಸಿದಂತೆ 1, ಕೃಷಿ ಇಲಾಖೆಗೆ ಸಂಬಂಧಿಸಿದಂತೆ 1, ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ 2, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 2, ಆಹಾರ ಇಲಾಖೆಗೆ ಸಂಬಂಧಿಸಿದಂತೆ 1, ಭೂದಾಖಲೆಗಳ ಸಹಾಯಕ ನಿರ್ದೇಶಕರ ಇಲಾಖೆಗೆ ಸಂಬಂಧಿಸಿದಂತೆ 2 ಸೇರಿ ಒಟ್ಟು 64 ಅರ್ಜಿಗಳು ಸ್ವೀಕೃತವಾದವು. ಸ್ವೀಕೃತವಾದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಪರಿಹಾರ ಒದಗಿಸಬೇಕೆಂದು ತಹಸೀಲ್ದಾರರು ಸೂಚಿಸಿದರು.ಆಂದೋಲನದಲ್ಲಿ ಗ್ರೇಡ್-2 ತಹಸೀಲ್ದಾರ್ ಎಸ್.ಎಚ್.ಅರಕೇರಿ, ತಾಪಂ ಸಹಾಯಕ ನಿರ್ದೇಶಕ ಪ್ರಕಾಶ ದೇಸಾಯಿ, ಜಿಪಂ ಎಇಇ ವಿಲಾಸ ರಾಠೋಡ, ಕುಡಿಯುವ ನೀರು ವಿಭಾಗದ ಎಇಇ ವಿ.ಬಿ.ಗೊಂಗಡಿ, ಸಿಡಿಪಿಒ ಶಿಲ್ಪಾ ಹಿರೇಮಠ, ಬಿಇಒ ರೇಣುಕಾ ಕಲಬುರ್ಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಸ್.ಜಿ.ಕುಂಟೋಜಿ, ಹೆಸ್ಕಾಂ ಎಇಇ ರೂಪೇಶ ಶಾಹ, ಮನಗೂಳಿ ಠಾಣೆಯ ಪಿಎಸೈ ರಾಠೋಡ, ಶಿರಸ್ತೇದಾರ ಮಹೇಶ ಬಳಗಾನೂರ, ಕಂದಾಯ ನಿರೀಕ್ಷಕ ಎಸ್.ಬಿ.ಮುಲ್ಲಾ, ಸಂತೋಷ ದೇಸಾಯಿ, ಗ್ರಾಮ ಆಡಳಿತಾಧಿಕಾರಿಗಳಾದ ಶಿವಾನಂದ ಹಳ್ಳೂರ, ಸಂತೋಷ ಕುಂಟೋಜಿ, ಎಸ್.ಎಚ್. ಶಿರಶ್ಯಾಡ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.