ಪೂರ್ವಸಿದ್ಧತೆ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ । ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಸೂಚನೆ ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಫೆ.15ರಂದು ಜಿಲ್ಲಾದ್ಯಂತ ಪ್ರವೇಶ ಪರೀಕ್ಷೆ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ ನೀಡಿದರು.ವಸತಿ ಶಾಲೆಗಳಲ್ಲಿ ಬರುವ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ದಾಖಲಿಗೆ ಪ್ರವೇಶ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿ ರನ್ನ, ಗಾಂಧಿ ತತ್ವ, ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಪರೀಕ್ಷೆ ನಡೆಯಲಿದೆ.
ಫೆ.15ರಂದು ಮಧ್ಯಾಹ್ನ 02.30 ರಿಂದ ಸಂಜೆ 04.30 ರವರೆಗೆ ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, 7,317 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ. ಪ್ರವೇಶ ಪರೀಕ್ಷೆಯನ್ನು ವ್ಯವಸ್ಥಿತ ರೀತಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದಂತೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಗದಿತ ವೇಳೆಯೊಳಗೆ ಆಯಾ ಮಾರ್ಗಾಧಿಕಾರಿಗಳು ಪ್ರಶ್ನೆಪತ್ರಿಕೆಯನ್ನು ತಲುಪಿಸಬೇಕು. ಪರೀಕ್ಷೆ ಬಳಿಕ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ನಿಗದಿತ ಸ್ಥಳಕ್ಕೆ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದರು.ಈಗಾಗಲೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಇಲಾಖೆಯವರು ಪರೀಕ್ಷಾ ದಿನದಂದು ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ಬಳಸದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ತಪಾಸಣೆಯನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಪುಟ್ಟಸ್ವಾಮಿ ಪ್ರವೇಶ ಮಾಹಿತಿ ನೀಡಿ, ಪ್ರವೇಶ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, 7,317 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಚಳ್ಳಕೆರೆ ತಾಲೂಕಿನಲ್ಲಿ 5 ಪರೀಕ್ಷಾ ಕೇಂದ್ರಗಳಲ್ಲಿ 1,919 ವಿದ್ಯಾರ್ಥಿಗಳು.ಚಿತ್ರದುರ್ಗ ತಾಲೂಕಿನ 2 ಕೇಂದ್ರಗಳಲ್ಲಿ 915 ವಿದ್ಯಾರ್ಥಿಗಳು, ಹಿರಿಯೂರಿನ 3 ಕೇಂದ್ರಗಳಲ್ಲಿ 1,341, ಹೊಳಲ್ಕೆರೆಯ 2 ಕೇಂದ್ರಗಳಲ್ಲಿ 591, ಹೊಸದುರ್ಗದ 4 ಕೇಂದ್ರಗಳಲ್ಲಿ 1,297 ಹಾಗೂ ಮೊಳಕಾಲ್ಮೂರು ತಾಲೂಕಿನ 4 ಕೇಂದ್ರಗಳಲ್ಲಿ 1,254 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ತಲುಪಿಸಲು ಹಾಗೂ ಉತ್ತರ ಪತ್ರಿಕೆ ಸ್ವೀಕರಿಸಲು ಈಗಾಗಲೆ 21 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ವೈರ್‍ಲೆಸ್ ಸೆಟ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.
ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರರು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಉಪನ್ಯಾಸಕರು, ಪ್ರಾಂಶುಪಾಲರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.