ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಕೆರೆಗೋಡು ಗ್ರಾಮಾಂತರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಜ್ಞ ವೈದ್ಯಾಧಿಕಾರಿಗಳ ತಂಡದಿಂದ ಉಚಿತ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರ ಆರೋಗ್ಯಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಜಿಲ್ಲೆಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಎಲ್ಲ ಜನರಿಗೆ ಉಚಿತ ಆರೋಗ್ಯ ತಪಾಸಣೆ, ತಜ್ಞ ವೈದ್ಯರ ಸಲಹೆ, ಅಗತ್ಯ ಔಷಧೋಪಚಾರ ಹಾಗೂ ಆರೋಗ್ಯ ಜಾಗೃತಿ ಸೇವೆಗಳನ್ನು ಒದಗಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಪ್ರಾರಂಭಿಕ ಹಂತದಲ್ಲೇ ರೋಗಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣವೇ ಪ್ರಮುಖ ಉದ್ದೇಶ ಎಂದರು.ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಮಾತನಾಡಿ. "ಉತ್ತಮ ಆರೋಗ್ಯವೇ ಉತ್ತಮ ಜೀವನದ ಅಡಿಪಾಯ. ಮನಸ್ಸು ಆರೋಗ್ಯಕರವಾಗಿದ್ದರೆ ದೇಹವೂ ಆರೋಗ್ಯಕರವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಸಮಾನ ಕಾಳಜಿ ವಹಿಸಬೇಕು. ವಿಶೇಷವಾಗಿ ಹೃದಯ ಸಂಬಂಧಿತ ಕಾಯಿಲೆಗಳ ಲಕ್ಷಣಗಳು ಕಂಡುಬಂದ ತಕ್ಷಣವೇ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ. ಪ್ರಾರಂಭಿಕ ಹಂತದಲ್ಲಿಯೇ ರೋಗ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ ಗುಣಪಡಿಸಬಹುದು ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲ ವ್ಯಾಯಾಮ, ಸಮತೋಲಿತ ಆಹಾರ, ಸರಿಯಾದ ನಿದ್ರೆ ಮತ್ತು ಒತ್ತಡ ನಿರ್ವಹಣೆ ಅತ್ಯಂತ ಅವಶ್ಯಕ ಎಂದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಪಿ.ನರಸಿಂಹಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಸಿ. ಬೆಟ್ಟಸ್ವಾಮಿ, ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಕೆರೆಗೋಡು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ವಸಂತರಾಜು ,ಕೆರೆಗೋಡು ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಜಿ. ರಾಮಲಿಂಗೇಗೌಡ ಉಪಸ್ಥಿತರಿದ್ದರು.