ಬರ ನಿರ್ವಹಣೆ, ಪೂರ್ವ ಮುಂಗಾರು ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆಕನ್ನಡಪ್ರಭ ವಾರ್ತೆ ಯಾದಗಿರಿ
ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ನಿರ್ದೇಶನ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಮಸ್ಯೆ ಉಂಟಾದಾಗ ಸ್ಪಂದಿಸುವುದಕ್ಕಿಂತ, ಸಮಸ್ಯೆ ಬರದಂತೆ ಮುಂಜಾಗ್ರತೆ ವಹಿಸುವುದು ಸೂಕ್ತ ಎಂದರು.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದ ಸಂದರ್ಭದಲ್ಲಿ ಪ್ರವಾಹ, ಜನ ಜಾನುವಾರು ಪ್ರಾಣಹಾನಿ, ಮನೆಗಳ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಇಂತಹ ಸಂದರ್ಭದಲ್ಲಿ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕೆಂದರು. ರೋಗ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಪ್ರವಾಹ ಉಂಟಾಗುವ ಸಾಧ್ಯತೆ ಕಂಡುಬಂದಾಗ ಅಂತಹ ಸಂದರ್ಭದಲ್ಲಿ ಕಂದಾಯ, ಜೆಸ್ಕಾಂ, ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಸೇರಿದಂತೆ ಇನ್ನಿತರ ಮಹತ್ವದ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು. ಹಾಗೂ ಆಯಾ ತಾಲೂಕಿನ ತಹಸೀಲ್ದಾರರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.ಚರಂಡಿ ಶುಚಿಗೊಳಿಸಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯಲು ಎಲ್ಲಾ ಕಡೆ ಚರಂಡಿಗಳನ್ನು ಶುಚಿಯಾಗಿರಿಸಬೇಕು. ಚರಂಡಿಯಿಂದ ಕಸ ತೆಗೆದ ಕೂಡಲೇ ಅದರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಇಒ ಇದ್ದರು.ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ವ್ಯಾಪಕ ಮಳೆ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಿ. ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಮಳೆಯಾದರೂ ಸಹ, ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕೇಳಿಬರುತ್ತದೆ. ಆದ್ದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.