ರಾಯಚೂರು: ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳಿಗೆ ಮತ್ತು ಯೋಜನೆಗಳ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಒಂದು ವಾರದೊಳಗೆ ಶೇ.100ರಷ್ಟು ಅನುದಾನ ಖರ್ಚು ಮಾಡಿಕೊಂಡು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳನ್ನು ಹಾಗೂ ಇಲಾಖೆಗೆ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಈ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡ ನಂತರ ಸಂಬಂಧಪಟ್ಟ ಇಲಾಖೆಯಿಂದ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ ಸೇರಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗದಜರು ಹಾಜರಿದ್ದರು.