ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಎಇ ಸೂಚನೆ

KannadaprabhaNewsNetwork | Published : Oct 25, 2024 1:09 AM

ಸಾರಾಂಶ

ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಮಲೆಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಕಾರ್ಯದರ್ಶಿ ಎ.ಈ ರಘು ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಪ್ರಯುಕ್ತ ಭಕ್ತಾದಿಗಳಿಗೆ ಸಕಲ ಸಿದ್ಧತೆಗಳ ಬಗ್ಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ.ಈ ರಘು ಪರಿಶೀಲನೆ ನಡೆಸಿದರು.

ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ನಿಗದಿತ ಸಮಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಯಾವುದೇ ಲೋಪದೋಷಗಳು ಇಲ್ಲದಂತೆ, ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಸ್ವಚ್ಛತೆಗೆ ಆದ್ಯತೆ ನೀಡಿ: ಶ್ರೀ ಕ್ಷೇತ್ರ ಮಾದಪ್ಪನ ಸನ್ನಿಧಿಯಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ದೀಪಾವಳಿ ಹಬ್ಬದ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಹಾಗೂ ವಿವಿಧ ಭಾಗಗಳಿಂದ ತಮಿಳುನಾಡಿನಿಂದಲೂ ಬರುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿ ಸಿಬ್ಬಂದಿ ವರ್ಗ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿ ವರ್ಗದವರಿಗೆ ತಿಳಿಸಿದರು.

ಶೌಚಾಲಯ ಪರಿಶೀಲನೆ:

ಮಲೆಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷವಾಗಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯ ವ್ಯಾಪ್ತಿಯಲ್ಲಿ ಇರುವ ಶೌಚಾಲಯಗಳನ್ನು ಪರಿಶೀಲನೆ ನಡೆಸಿ ಶಿಸ್ತಿನಿಂದ ಸಿಬ್ಬಂದಿ ವರ್ಗ ಭಕ್ತಾದಿಗಳಿಗೆ ಸೂಕ್ತ ರೀತಿಯಲ್ಲಿ ಸ್ವಚ್ಛಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.ಶುದ್ಧ ಕುಡಿಯುವ ನೀರಿಗೆ ಆದ್ಯತೆ:

ಮಾದೇಶ್ವರ ಬೆಟ್ಟಕ್ಕೆ ದೀಪಾವಳಿ ಜಾತ್ರೆಗೆ ಬರುವ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆಯಲ್ಲಿ ಇರುವುದರಿಂದ ದೇವಾಲಯ ಸಮೀಪ ಹಾಗೂ ಆಯಕಟ್ಟಿನ ವಿವಿಧ ಸ್ಥಳಗಳಲ್ಲಿ ಭಕ್ತರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಬಗ್ಗೆ ಚರ್ಚೆ:

ದೀಪಾವಳಿ ಹಬ್ಬದ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ನಡೆಯುವ ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳ ಬಗ್ಗೆ ಪಾರು ಪತ್ತೆದಾರರು ಹಾಗೂ ಪ್ರಧಾನ ಆಗಮಿಕರು ಮತ್ತು ಪ್ರಧಾನ ಅರ್ಚಕರೊಡನೆ ಚರ್ಚೆ ನಡೆಸಿ ಹಾಲರುವೆ ಸೇವೆಗೆ ದಾನಿಗಳು ನೀಡಿರುವ 101 ಸೀರೆಗಳನ್ನು ಪರಿಶೀಲಿಸಿ ವಿವಿಧ ಸೇವೆಗಳ ಬಗ್ಗೆ ಸಹ ಚರ್ಚೆ ನಡೆಸಿದರು.

ಮಲೆಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳು ದೀಪಾವಳಿ ಜಾತ್ರಾ ವಿಶೇಷ ದಿನಗಳಲ್ಲಿ ರಾಜ್ಯದ ಹಾಗೂ ವಿವಿಧ ಜಿಲ್ಲೆಗಳಿಂದ ಬರುವ ಲಕ್ಷಾಂತರ ಭಕ್ತರಿಗೆ ಯಾವುದೇ ಲೋಪದೋಷಗಳು ಇಲ್ಲದಂತೆ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯುವ ಕಾರ್ಯಗಳ ಬಗ್ಗೆ ಪ್ರಧಾನ ಆಗಮಿಕರು ಮತ್ತು ಅರ್ಚಕರ ಜೊತೆ ಚರ್ಚೆ ನಡೆಸಿ ಸಕಲ ಸಿದ್ಧತೆ ಕ್ರಮ ಕೈಗೊಳ್ಳಲಾಗಿದೆ.

ಎ.ಈ ರಘು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ

Share this article