ಎಸ್ಪಿ ಬಳಿಕ ಈಗ ದಕ್ಷಿಣ ಕನ್ನಡ ಡೀಸಿ ಎತ್ತಂಗಡಿ

KannadaprabhaNewsNetwork | Published : Jun 18, 2025 12:07 AM

ಕರಾವಳಿ ಜಿಲ್ಲೆಗಳಲ್ಲಿ ಕೋಮು ಗದ್ದಲ ತಡೆಗೆ ವಿಫಲರಾದ ಹಿರಿಯ ಅಧಿಕಾರಿಗಳನ್ನು ಬದಲಿಸುವಂತೆ ಎದ್ದಿದ್ದ ಕೂಗಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಎಚ್‌.ವಿ.ದರ್ಶನ್‌ ಅವರನ್ನು ನಿಯೋಜಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಕೋಮು ಗದ್ದಲ ತಡೆಗೆ ವಿಫಲರಾದ ಹಿರಿಯ ಅಧಿಕಾರಿಗಳನ್ನು ಬದಲಿಸುವಂತೆ ಎದ್ದಿದ್ದ ಕೂಗಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಎಚ್‌.ವಿ.ದರ್ಶನ್‌ ಅವರನ್ನು ನಿಯೋಜಿಸಿದೆ.

ದಕ್ಷಿಣ ಕನ್ನಡದಲ್ಲಿ ಕೋಮು ಗದ್ದಲ ಹೆಚ್ಚಾದ ಸಂದರ್ಭದಲ್ಲಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಬದಲಿಸಿ ಕ್ರಮ ಕೈಗೊಳ್ಳಲಾಗಿತ್ತು. ಅದರ ಜತೆಗೆ ಇದೀಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಬದಲಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಇ-ಗವರ್ನೆನ್ಸ್‌ ನಿರ್ದೇಶಕ ಟಿ.ಕೆ.ಸ್ವರೂಪ್‌ ಅವರನ್ನು ಉಡುಪಿ ಜಿಲ್ಲೆ ಜಿಲ್ಲಾಧಿಕಾರಿಯಾಗಿ, ವಾಣಿಜ್ಯ ಇಲಾಖೆ ಹೆಚ್ಚುವರಿ ಆಯುಕ್ತ ಎಚ್‌.ವಿ.ದರ್ಶನ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಇನ್ನು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ನೋಂದಣಿ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತ ಹುದ್ದೆಗೆ ವರ್ಗಾಯಿಸಲಾಗಿದೆ.

ಅವರೊಂದಿಗೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 16 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶಿಸಿದೆ.

ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಕೆ.ಎಂ. ಜಾನಕಿ ಅವರನ್ನು ಕೆಪಿಎಸ್‌ಸಿ ಕಾರ್ಯದರ್ಶಿ ಹುದ್ದೆಗೆ, ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರನ್ನು ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕ ಹುದ್ದೆಗೆ, ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾ ಕುಮಾರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ, ಬಿಬಿಎಂಪಿಯ ವಿಶೇಷ ಆಯುಕ್ತ ಡಾ. ಅವಿನಾಶ್‌ ಮೆನನ್‌ ರಾಜೇಂದ್ರನ್‌ ಅವರನ್ನು ರಾಷ್ಟ್ರೀಯ ಆರೋಗ್ಯ ಮಿಷನ್‌ ಮತ್ತು ಆರೋಗ್ಯ ನಿರ್ದೇಶನಾಲಯದ ಯೋಜನಾ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.

ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ನಳಿನಿ ಅತುಲ್‌ ಅವರನ್ನು ಕೆಕೆಆರ್‌ಡಿಬಿ ಕಾರ್ಯದರ್ಶಿಯಾಗಿ, ದಾವಣಗೆರೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸುರೇಶ್‌ ಬಿ.ಇಟ್ನಾಳ್‌ ಅವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ, ರಾಷ್ಟ್ರೀಯ ಆರೋಗ್ಯ ಯೋಜನೆ ಮತ್ತು ಆರೋಗ್ಯ ನಿರ್ದೇಶನಾಲಯದ ಯೋಜನಾ ನಿರ್ದೇಶಕ ಡಾ. ವೈ.ನವೀನ್‌ ಭಟ್‌ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ರಾಹುಲ್‌ ರತ್ನಂ ಪಾಂಡೆ ಅವರನ್ನು ಸೆಂಟರ್‌ ಫಾರ್‌ ಸ್ಮಾರ್ಟ್‌ ಗೌವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್‌ ಜಿ.ಟಿ.ನಿಟ್ಟಲಿ ಅವರನ್ನು ಮಧ್ಯಾಹ್ನದ ಬಿಸಿಯೂಟದ ಸಾರ್ವಜನಿಕ ಸೂಚನಾ ನಿರ್ದೇಶಕರನ್ನಾಗಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವರ್ಣಿತ್‌ ನೇಗಿ ಅವರನ್ನು ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಬಾಗಲಕೋಟೆ ಪುನರ್ವಸತಿ ಮತ್ತು ಪರಿಹಾರ ವಿಭಾಗದ ಪ್ರಧಾನ ವ್ಯವಸ್ಥಾಪಕ ಗಿಟ್ಟೆ ಮಾಧವ್‌ ವಿಠ್ಠಲ್‌ ರಾವ್‌ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಹುದ್ದೆಯ ನಿರೀಕ್ಷೆಯಲ್ಲಿದ್ದ ಸಂಗಪ್ಪ ಅವರನ್ನು ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ, ಗರೀಮಾ ಪನ್ವರ್‌ ಅವರನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನಿಯೋಜಿಸಲಾಗಿದೆ.

ಇವರೊಂದಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷ ಎಚ್‌. ಬಸವರಾಜನ್‌ ಅವರಿಗೆ ಜಕ್ಕೂರಿನ ಫ್ಲೈಯಿಂಗ್‌ ತರಬೇತಿ ಶಾಲೆಯ ನಿರ್ದೇಶಕ ಹುದ್ದೆಯನ್ನು, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್‌ ಅವರನ್ನು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ. ಕೆ.ವಿ.ತ್ರಿಲೋಕಚಂದ್ರ ಅವರಿಗೆ ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕ ಹುದ್ದೆ, ರಾಜ್ಯ ಏಡ್ಸ್‌ ಪ್ರಿವೆನ್ಷನ್‌ ಸೊಸೈಟಿಯ ಯೋಜನಾ ನಿರ್ದೇಶಕಿ ಆರ್‌. ವಿನೋತ್‌ ಪ್ರಿಯಾ ಅವರಿಗೆ ರಾಜ್ಯ ಮಟ್ಟದ ನಿರ್ವಹಣಾ ಸೆಲ್‌ನ ವಿಶೇಷ ಅಧಿಕಾರಿ ಹುದ್ದೆ ಹಾಗೂ ಪಿಯು ಶಿಕ್ಷಣದ ನಿರ್ದೇಶಕಿ ಸಿಂಧು ಬಿ.ರೂಪೇಶ್‌ ಅವರಿಗೆ ಮಧ್ಯಾಹ್ನ ಬಿಸಿಯೂಟದ ಸಾರ್ವಜನಿಕ ನಿರ್ದೇಶನದ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.