ಬಿಜೆಪಿ- ಜೆಡಿಎಸ್ ನಾಯಕರ ವಿರುದ್ಧ ಅಹಿಂದ ಕಾರ್ಯಕರ್ತರ ಪ್ರತಿಭಟನೆ

KannadaprabhaNewsNetwork | Published : Aug 6, 2024 12:35 AM

ಸಾರಾಂಶ

ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಮುಂಡಾ ಹಗರಣ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವಿಚಾರದಲ್ಲಿ ಎಸ್ಐಟಿ ಈಗಾಗಲೇ ತೆರಿಕೆ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಸತ್ಯಾ ಸತ್ಯತೆ ಹೊರಬರಲಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮುಡಾ ಹಗರಣದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕುತಂತ್ರ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಅಹಿಂದ ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕುರುಬರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ನೇತೃತ್ವದಲ್ಲಿ ತಾಲೂಕಿನ ವಿವಿಧೆಗಳಿಂದ ಆಗಮಿಸಿದ್ದ ಮಹಿಳೆಯರು ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಎನ್‌ಡಿಎ ನಾಯಕರಾದ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಮುಂಡಾ ಹಗರಣ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವಿಚಾರದಲ್ಲಿ ಎಸ್ಐಟಿ ಈಗಾಗಲೇ ತೆರಿಕೆ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಸತ್ಯಾ ಸತ್ಯತೆ ಹೊರಬರಲಿದೆ ಎಂದು ಆಗ್ರಹಿಸಿದರು.

ಹಗರಣಗಳ ತನಿಖೆ ಪೂರ್ಣಗೊಳ್ಳುವ ಮುನ್ನವೇ ಬಿಜೆಪಿ ಮತ್ತು ಜೆಡಿಎಸ್ ನಾಯಕರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಕುಗ್ಗಿಸಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಎನ್ ಡಿ ಎ ಮಿತ್ರ ಪಕ್ಷಗಳ ನಾಯಕರುಗಳು ವಿನಾಕಾರಣ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಅವರ ಜೊತೆ ಕೈಜೋಡಿಸಲಿ ಎಂದು ಅಹಿಂದ ಮುಖಂಡರು ಸಲಹೆ ನೀಡಿದರು. ನಂತರ ಪ್ರತಿಭಟನಾಕಾರರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಜನಾಂದೋಲನ ಸಮಾವೇಶದ ಸ್ಥಳದಲ್ಲಿ ನಾಯಕರ ವಿರುದ್ಧ ಘೋಷಣೆ ಕೂಗಿ ಕೆಲ ಕಾಲ ಧರಣಿ ನಡೆಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಸುರೇಶ್, ತಾಲೂಕು ಘಟಕದ ಅಧ್ಯಕ್ಷ ಎಂ.ಮರಿಹೆಗಡೆ, ಪ್ರಧಾನ ಕಾರ್ಯದರ್ಶಿ ಕೆ.ನಾಗರಾಜು, ಮುಖಂಡರಾದ ದೊಡ್ಡಯ್ಯ, ಪೂಜಾರಿ ಮಹೇಶ್, ರಮೇಶ್, ಮರಿ ಕಾಳಯ್ಯ ಪಾಲ್ಗೊಂಡಿದ್ದರು.

Share this article