ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಖಂಡಿಸಿ ಹಾಗೂ ರಾಜ್ಯಪಾಲರನ್ನು ಕೇಂದ್ರಕ್ಕೆ ವಾಪಾಸ್ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ ವಿಜಯನಗರ ಜಿಲ್ಲಾ ಅಹಿಂದ ಸಂಘಟನೆಗಳ ಒಕ್ಕೂಟದ ಮುಖಂಡರ ನೇತೃತ್ವದಲ್ಲಿ ನಗರದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರದ ಡಾ.ಬಿ.ಆರ್.ಅಂಬೇಡರ್ ವೃತ್ತದಿಂದ ನಗರದ ತಾಲೂಕು ಕಚೇರಿವರಗೆ ಮೆರವಣಿಗೆ ನಡೆಸಿ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮಾಡಲಾಯಿತು.ರಾಜ್ಯದ ರಾಜ್ಯಪಾಲರು ದುರುದ್ದೇಶದಿಂದ ಜನರಿಂದ ಆಯ್ಕೆಯಾದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನೀಡಿದ ದೂರಿನ ಆಧಾರದ ಮೇಲೆ ಏಕಾಏಕಿ ಪ್ರಾಸಿಕ್ಯೂಷನ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ 40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಒಂದೇ ಒಂದು ಹಗರಣ ಮಾಡಿಲ್ಲ. ಅವರ ಮೇಲೆ ಕಪ್ಪು ಚುಕ್ಕೆಯೂ ಇಲ್ಲ. ಆದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಕೇಂದ್ರ ಸರ್ಕಾರದ ಒತ್ತಡದ ಮೇಲೆ ರಾಜ್ಯಪಾಲರು ಈ ಕಾರ್ಯ ಮಾಡಿದ್ದಾರೆ. ಕೂಡಲೇ ಅವರನ್ನು ವಾಪಾಸ್ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ತಹಸೀಲ್ದಾರ್‌ರ ಮೂಲಕ ರಾಷ್ಟ್ರಪತಿಯವರಿಗೆ ಮನವಿಪತ್ರ ರವಾನಿಸಲಾಯಿತು.