ಪರೀಕ್ಷೆಯ ಫಲಿತಾಂಶದ ಪಾರದರ್ಶಕತೆಯ ಕುರಿತು ವಿದ್ಯಾರ್ಥಿ, ಪೋಷಕರಿಗೆ ಪ್ರಶ್ನೆ । ಹೆಚ್ಚುವರಿ ಅಂಕ ನೀಡುವಲ್ಲಿ ಪಕ್ಷಪಾತ ಆರೋಪ
ನೀಟ್ ಪರೀಕ್ಷೆಯಲ್ಲಿ ನಡೆದ ಭ್ರಷ್ಠಾಚಾರ ವಿರೋಧಿಸಿ ಹಾಗೂ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಎಐಡಿಎಸ್‌ಒ ಜಿಲ್ಲಾ ವಿಭಾಗದ ಸುಶ್ಮಾ ಮಾಧ್ಯಮದೊಂದಿಗೆ ಮಾತನಾಡಿ, ಜೂನ್ ೪ ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಸಿ ನೀಡಿದೆ. ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿ ಧೋರಣೆಯಾಗಿದೆ ಎಂದು ದೂರಿದರು.ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂಬ ಆರೋಪವಿದೆ. ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷೆಯ ಪಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಒನ ದನುಶ್ರೀ, ಸೌಮ್ಯ, ಅಭಿಷೇಕ್ ಇತರರು ಇದ್ದರು.