ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

KannadaprabhaNewsNetwork | Published : Oct 17, 2024 12:45 AM

ಸಾರಾಂಶ

ಕಳೆದ ಒಂದು ತಿಂಗಳಿನಿಂದ ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ.

ಬಳ್ಳಾರಿ: ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿಯನ್ನು ಖಂಡಿಸಿ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದ (ಎಐಡಿಎಸ್‌ಒ) ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಕಳೆದ ಒಂದು ತಿಂಗಳಿನಿಂದ ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಅತ್ಯಂತ ಹಳೆಯ ಕಾಲೇಜುಗಳಲ್ಲಿ ಒಂದಾದ ಹಾಗೂ ರಾಜ್ಯದ ಪ್ರಥಮ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಾದ ಯುಬಿಡಿಟಿಯಲ್ಲಿ ಶೇ.50 ರಷ್ಟು ಸೀಟುಗಳಲ್ಲಿ ಭಾರೀ ಶುಲ್ಕ ಏರಿಕೆ ಮಾಡಲಾಗಿದೆ. ₹97 ಸಾವಿರ ಶುಲ್ಕ ಪಡೆಯಲು ನಿರ್ಧರಿಸಲಾಗಿದೆ. ಬಡ ವಿದ್ಯಾರ್ಥಿಗಳಿಗೆ ಇದನ್ನು ಭರಿಸಲು ಕಷ್ಟಸಾಧ್ಯವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಈರಣ್ಣ ಮಾತನಾಡಿ,

ಬೆಂಗಳೂರಿನ ಪ್ರತಿಷ್ಠಿತ ಯುವಿಸಿಇ ಕಾಲೇಜ್ ಸೇರಿದಂತೆ ರಾಜ್ಯದ ಹಲವು ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಏರಿಸುವ ಹಾಗೂ ಕಾಲೇಜು ನಿರ್ವಹಣೆಯ ಹಣವನ್ನು ವಿದ್ಯಾರ್ಥಿಗಳ ಶುಲ್ಕ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇದು ಸಾರ್ವಜನಿಕ ಶಿಕ್ಷಣದ ಮೂಲ ಉದ್ದೇಶಕ್ಕೆ ವಿರುದ್ಧದ ನಡೆಯಾಗಿದೆ ಎಂದು ಹೇಳಿದರು.

ದಾವಣಗೆರೆಯ ಯುಬಿಡಿಟಿ ಕಾಲೇಜಿನಲ್ಲಿ ಶೇ.50 ಹೆಚ್ಚುವರಿ ಶುಲ್ಕವನ್ನು ಕೈಬಿಡಬೇಕು. ಈ ವರ್ಷ ಪಡೆದಿರುವ ಹೆಚ್ಚುವರಿ ಹಣವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಬೇಕು.

ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು. ರಾಜ್ಯದ ಎಲ್ಲ ಸರ್ಕಾರಿ ಹಾಗೂ ವಿವಿಯ ಅಡಿಯಲ್ಲಿ ಬರುವ ಇಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡಬೇಕು. ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರ ವಹಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಖಜಾಂಚಿ ಅನುಪಮಾ, ಜಿಲ್ಲಾ ಉಪಾಧ್ಯಕ್ಷೆ ಎಂ.ಶಾಂತಿ, ಉಮಾ, ಪ್ರಮೋದ್, ಕಚೇರಿ ಕಾರ್ಯದರ್ಶಿ ನಿಹಾರಿಕಾ, ನಂದಿತಾ, ರೇಣುಕಾ, ತಿಪ್ಪೇಶ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿಪತ್ರ ಕಳಿಸಿಕೊಟ್ಟರು.

Share this article