ಬಳ್ಳಾರಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಶಾಂತಿ ಮಾತನಾಡಿ, 2022ರಲ್ಲಿ ರಾಜ್ಯದಲ್ಲಿ ಶೇ. 40 ರಷ್ಟು, 2023ರಲ್ಲಿ ಶೇ. 65, 2024ರಲ್ಲಿ ಶೇ. 93ರಷ್ಟು ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ. ಪ್ರಸ್ತುತ ದಿನದಲ್ಲಿ ಉನ್ನತ ಶಿಕ್ಷಣದ ವೆಚ್ಚ ಅತ್ಯಂತ ದುಬಾರಿಯಾಗುತ್ತಿದ್ದು, ವಿದ್ಯಾರ್ಥಿ ವೇತನದಿಂದ ಒಂದಷ್ಟು ಸಹಾಯವಾಗುತ್ತಿತ್ತು. ಆದರೆ, ಸರ್ಕಾರ ಈ ಬಗ್ಗೆ ಗಮನ ನೀಡದೆ ನಿರ್ಲಕ್ಷ್ಯ ವಹಿಸುತ್ತಿದೆ. ಹಲವು ಬಾರಿ ಮನವಿ ಪತ್ರ ಸಲ್ಲಿಸಿದ್ದಾಗ್ಯೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಈರಣ್ಣ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಎಐಡಿಎಸ್‌ಒ ಜಿಲ್ಲಾ ಉಪಾಧ್ಯಕ್ಷೆ ಉಮಾ, ಜಿಲ್ಲಾ ಕಚೇರಿ ಕಾರ್ಯದರ್ಶಿ ನಿಹಾರಿಕಾ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.