ಧಾರವಾಡ: ಸಂಯೋಜನೆ ಹೆಸರಿನಲ್ಲಿ ಆರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನಿಲುವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೆಶನ್ (ಎಐಡಿಎಸ್‌ಓ) ವತಿಯಿಂದ ಮಂಗಳವಾರ ಇಲ್ಲಿಯ ವಿವೇಕಾನಂದ ವೃತ್ತದ ಬಳಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು.
ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 3500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯ ವ್ಯವಸ್ಥೆ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಹಲವು ಶಾಲೆಗಳ ಕಟ್ಟಡಗಳು ವರ್ಷಗಳಿಂದ ದುರಸ್ತಿ ಕಾಣದೆ ಚಾವಣಿಗಳು ಸೋರುತ್ತಿವೆ. ಎಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. 29 ಸಾವಿರಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಗೊಂಡು ಬೀಳುವ ಹಂತದಲ್ಲಿವೆ. ಸರ್ಕಾರದ ಬೇಜವಾಬ್ದಾರಿತನದಿಂದ, ಹಲವು ವರ್ಷಗಳಿಂದ ದುರಸ್ತಿ ಕಾಣದ ಶಾಲೆಗಳ ಚಾವಣಿ ಕುಸಿದು ಮಕ್ಕಳು ಗಾಯಗೊಂಡಿರುವುದು, ಪ್ರಾಣ ಕಳೆದುಕೊಂಡಿರುವುದಂತೂ ಹೃದಯವಿದ್ರಾವಕ ಎಂದರು.
ರಾಜ್ಯದ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಯಾವ ಗಂಭೀರ ಸಮಸ್ಯೆಗಳನ್ನು ಪರಿಹರಿಸದೇ, ಕಡಿಮೆ ದಾಖಲಾತಿ ಹೆಸರಲ್ಲಿ ಶಾಲೆಗಳನ್ನು ಮುಚ್ಚುತ್ತಿರುವುದು ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ ಎಂದು ಕಿಡಿಕಾರಿದರು.ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನ ವಿರೋಧಿ ನಿರ್ಧಾರ ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆ ಇರುವ ಶಾಲೆಗಳನ್ನು ಮುಚ್ಚುವ ಬದಲು ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ನೀಡಿ ಅಭಿವೃದ್ಧಿಪಡಿಸಿ ರಕ್ಷಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸಿಂಧೂ ಕೌದಿ, ಪದಾಧಿಕಾರಿಗಳಾದ ಶಾಂತು, ಸ್ಫೂರ್ತಿ ಸೇರಿದಂತೆ ಹಲವರಿದ್ದರು.