ಕನ್ನಡಪ್ರಭ ವಾರ್ತೆ ಹಿರಿಯೂರು
ಸರ್ಕಾರಿ ಶಾಲೆಗಳ ಮುಚ್ಚುವಿಕೆ ವಿರೋಧಿಸಿ 50 ಲಕ್ಷ ಸಹಿಗಳನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಎಐಡಿಎಸ್‍ಒ ಸಿದ್ಧತೆ ನಡೆಸಿದ್ದು, ಆ.21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ರಾಜ್ಯವ್ಯಾಪಿ ಚಳುವಳಿಯ ಸಮಾರೋಪ ಸಭೆ ನಡೆಯಲಿದೆ.
ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಹಮ್ಮಿಕೊಂಡಿದ್ದ ಐತಿಹಾಸಿಕ 50 ಲಕ್ಷ ಸಹಿ ಸಂಗ್ರಹ ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿದ್ದು ಸರ್ಕಾರಿ ಶಾಲೆಗಳನ್ನು ಉಳಿಸಿ ಮತ್ತು ಬಲಪಡಿಸಿ ಎಂಬ ಕರೆಯೊಂದಿಗೆ ಪ್ರಾರಂಭವಾದ ಈ ಅಭಿಯಾನವು ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ವಿದ್ಯಾರ್ಥಿ ಚಳುವಳಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ.50,000ಕ್ಕೂ ಹೆಚ್ಚು ಸ್ವಯಂಸೇವಕರು ರಾಜ್ಯಾದ್ಯಂತ ಈ ಅಭಿಯಾನದಲ್ಲಿ ಭಾಗವಹಿಸಿದ್ದು ಪೋಷಕರು, ವಿದ್ಯಾರ್ಥಿಗಳು, ಸ್ಥಳೀಯ ನಾಗರಿಕರ ಜೊತೆ ಸೇರಿ ನೂರಾರು ಪ್ರತಿಭಟನಾ ಸಭೆಗಳನ್ನು ನಡೆಸಿದ್ದಾರೆ. ರಾಜ್ಯದ 30 ಜಿಲ್ಲೆಗಳ 150 ಕ್ಕೂ ಹೆಚ್ಚು ತಾಲೂಕುಗಳನ್ನು ಈ ಅಭಿಯಾನವು ತಲುಪಿದ್ದು 1000ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ,ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ, ಚಲನಚಿತ್ರ ನಟ ಕಿಶೋರ್, ಎಐಡಿಎಸ್‍ಒ ಪ್ರಧಾನ ಕಾರ್ಯದರ್ಶಿ ಶಿಬಾಶಿಷ್ ಪ್ರಹರಾಜ್, ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ರಾಜ್ಯಾಧ್ಯಕ್ಷರಾದ ಅಶ್ವಿನಿ ಕೆ.ಎಸ್.ಹಾಜರಿರುವರು ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ.ಈರಣ್ಣ ಹಾಗೂ ಸದಸ್ಯರಾದ ಎಂ.ಶಾಂತಿ ತಿಳಿಸಿದ್ದಾರೆ.