ಅತ್ಯಾಚಾರ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಐಎಂಎಸ್‌ಎಸ್‌ ಪ್ರತಿಭಟನೆ

KannadaprabhaNewsNetwork | Published : Jan 16, 2025 12:45 AM

ಸಾರಾಂಶ

ಅತ್ಯಾಚಾರ ಪ್ರಕರಣ ಖಂಡಿಸಿ ಎಐಎಂಎಸ್‌ಎಸ್‌ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳ್ಳಾರಿ: ಸಂಡೂರು ತಾಲೂಕಿನ ತೋರಣಗಲ್‌ನಲ್ಲಿ ಐದು ವರ್ಷದ ಮಗುವಿನ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್‌ಎಸ್‌) ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕಾರ್ಖಾನೆಯಲ್ಲಿ ಕೆಲಸಕ್ಕೆಂದು ಜಾರ್ಖಂಡದಿಂದ ತೋರಣಗಲ್ಲಿಗೆ ಬಂದು ನೆಲೆಸಿದ್ದ ದಂಪತಿಯ ಐದು ವರ್ಷದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಮಗವಿನ ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯದಿಂದ ಆರೋಗ್ಯದಲ್ಲಿ ತೀವ್ರ ಏರುಪೇರಾದ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯಕೀಯ ಮೂಲಗಳ ಪ್ರಕಾರ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಎರಡು ದಿನಗಳಾದರೂ ಪೊಲೀಸರು ಈವರೆಗೆ ಅತ್ಯಾಚಾರಿಯನ್ನು ಬಂಧಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷೆ ಕೆ.ಎಂ. ಈಶ್ವರಿ ಅವರು, ಬಾಲಕಿಯನ್ನು ಅತ್ಯಾಚಾರಗೈದ ದುಷ್ಕರ್ಮಿಯನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಹಾಗೂ ಮಗುವಿನ ಭವಿಷ್ಯದ ಎಲ್ಲ ಜವಾಬ್ದಾರಿಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.ಜಿಲ್ಲಾ ಕಾರ್ಯದರ್ಶಿ ವಿಜಯಲಕ್ಷ್ಮೀ ಮಾತನಾಡಿ, ಬೆಂಗಳೂರಿನಲ್ಲಿಯೂ ಐದು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ಅವ್ಯಾಹತವಾಗಿ ಹೆಚ್ಚಾಗುತ್ತಿವೆ. ಸಾಮಾಜಿಕ ಮಾಧ್ಯಮ, ಇಂಟರ್ನೆಟ್, ಟಿವಿಗಳ ಮೂಲಕ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ-ಸಾಹಿತ್ಯ ಮತ್ತು ಮದ್ಯ ಮಾದಕ ವಸ್ತುಗಳು ಇಂತಹ ಅಪರಾಧಗಳಿಗೆ ಕಾರಣವಾಗುತ್ತಿವೆ. ಇನ್ನೊಂದೆಡೆ ಸಮಾಜದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಈ ಸಾಂಸ್ಕೃತಿಕ ಅಧಃಪತನದಿಂದಾಗಿ ವಿದ್ಯಾರ್ಥಿ- ಯುವಜನರು ಇಂತಹ ಹೀನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಪುಟ್ಟ ಕಂದಮ್ಮಗಳ ಮೇಲೂ ಕ್ರೌರ್ಯ ಎಸಗುವ ಪಶುತ್ವದ ಮಟ್ಟಕ್ಕೆ ತಲುಪುತ್ತಿದ್ದಾರೆ ಎಂದು ತಿಳಿಸಿದರು.

ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣವನ್ನು ಕಲ್ಪಿಸಬೇಕು. ಅಶ್ಲೀಲ ಸಿನಿಮಾ-ಸಾಹಿತ್ಯಗಳನ್ನು ನಿಷೇಧಿಸಬೇಕು. ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ಖಾತ್ರಿಪಡಿಸಿ ಮತ್ತೆ ಇಂತಹ ಅಪರಾಧಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಪ್ರಮುಖರಾದ ಪದ್ಮಾ, ವಿದ್ಯಾ, ಗಿರಿಜಾ, ಸೌಮ್ಯ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Share this article