ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಕುರಿತು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಅಣಕು ಪ್ರದರ್ಶನದ ಪೂರ್ವಭಾವಿ ಸಿದ್ಧತೆಯಲ್ಲಿ ಮಾತನಾಡಿದ ಅವರು, 2026ನೇ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ನಾಗರಿಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು ಈ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿಯೂ ಶುಕ್ರವಾರ ಸಂಜೆ 5 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆಕಸ್ಮಿಕ ವಾಯುದಾಳಿ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಾರ್ವಜನಿಕರನ್ನು ಹೇಗೆ ಸುರಕ್ಷಿತ ಸ್ಥಳಗಳಿಗೆ ರವಾನಿಸಬೇಕು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ಹೇಗೆ ಒದಗಿಸಬೇಕು ಮತ್ತು ವಿವಿಧ ಇಲಾಖೆಗಳು ಹೇಗೆ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂಬುದನ್ನು ಪ್ರಾಯೋಗಿಕವಾಗಿ ಪರೀಕ್ಷಿಸುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.ಈ ಅಣಕು ಪ್ರದರ್ಶನವು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಗೃಹರಕ್ಷಕದಳ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ನಾಗರಿಕ ರಕ್ಷಣಾ ಸ್ವಯಂ ಸೇವಕರು, ಗೃಹರಕ್ಷಕರು, ಎನ್‌ಸಿಸಿ ಹಾಗೂ ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಕೆಎಸ್‌ಆರ್‌ಟಿಸಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಡೆಯಲಿದೆ ಎಂದು ವಿವರಿಸಿದರು.
ಸಭೆಯಲ್ಲಿ ಡಿಎಚ್‌ಓ ಡಾ.ಕೆ.ಎಸ್.ನಟರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಗೀತಾ, ಡಿಎಸ್‌ಪಿಡಿಆರ್ ದಿಲೀಪ್ ಕುಮಾರ್, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಇಲಾಖೆ, ಪಾಲಿಕೆ, ಕೆಎಸ್‌ಆರ್‌ಟಿಸಿ, ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ತಾಲೀಮಿನ ಸಂದರ್ಭದಲ್ಲಿ ಅಗ್ನಿಶಾಮಕ ದಳ, ಪೊಲೀಸ್ ವಾಹನಗಳು ಹಾಗೂ ಆ್ಯಂಬುಲೆನ್ಸ್‌ಗಳ ಸಂಚಾರ ಇರಲಿದೆ, ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತರಿಸುವುದು, ಹುಡುಕಾಟ ಮತ್ತು ರಕ್ಷಣೆ ಹಾಗೂ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಸಾಗಿಸುವ ಪ್ರದರ್ಶನವಿರುತ್ತದೆ ಎಂದರು. ನಗರದಲ್ಲಿ ನಡೆಯಲಿರುವ ಈ ತಾಲೀಮು ಕೇವಲ ನಾಗರಿಕರ ಸುರಕ್ಷತೆ ಮತ್ತು ಜಾಗೃತಿಗಾಗಿ ಹಮ್ಮಿಕೊಂಡಿರುವ ಸಾಂಪ್ರದಾಯಿಕ ಸಿದ್ಧತೆಯಾಗಿದ್ದು, ಸಾರ್ವಜನಿಕರು ಸಹ ವೀಕ್ಷಿಸಲು ಭಾಗವಹಿಸಬಹುದು ಎಂದು ಹೇಳಿದರು.