ವರ್ಷದ ಹಿಂದೆಯೇ ತಿಳಿಸಿದ್ದರೂ ಕ್ರಮ ಕೈಗೊಳ್ಳದ ವಿಮಾನ ನಿಲ್ದಾಣ ಆಡಳಿತ: ಜಿಲ್ಲಾಧಿಕಾರಿ ಅಸಮಾಧಾನ
ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಜನವಸತಿ ಪ್ರದೇಶಗಳಿಗೆ ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಸಮಸ್ಯೆಯಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಒಂದು ವರ್ಷದ ಮೊದಲೇ ತಿಳಿಸಲಾಗಿದ್ದರೂ, ಕ್ರಮ ಕೈಗೊಳ್ಳದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಈ ಬಗ್ಗೆ ವರದಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಮಾನ ನಿಲ್ದಾಣದಿಂದ ನೀರು ಹರಿದು ಸಮಸ್ಯೆಯಾಗುವುದನ್ನು ತಪ್ಪಿಸುವ ಬಗ್ಗೆ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ವರದಿ ನೀಡಬೇಕು. ತಪ್ಪಿದರೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದರು.
ಸ್ಥಳೀಯ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಯೋಜನೆ ರಚಿಸಬೇಕು. ಸಂಬಂಧಪಟ್ಟ ತಹಸೀಲ್ದಾರ್ ಮತ್ತು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗಳು ಪರಿಶೀಲಿಸಬೇಕು ಎಂದರು.
ಪ್ರಾಕೃತಿಕ ದುರಂತದಲ್ಲಿ ನಡೆಯುವ ಜೀವಹಾನಿ ತಪ್ಪಿಸುವುದೇ ಮೊದಲ ಆದ್ಯತೆಯಾಗಿದೆ. ಪ್ರಮುಖವಾಗಿ ಜನವಸತಿ ಪ್ರದೇಶ ಮತ್ತು ಮನೆಗಳಲ್ಲಿ ವಾಸಿಸುವ ಸಾರ್ವಜನಿಕರ ರಕ್ಷಣೆ ಪ್ರಮುಖ ಗುರಿ. ಈ ನಿಟ್ಟಿನಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಪ್ರತಿಯೊಂದು ಪ್ರದೇಶಕ್ಕೆ ಭೇಟಿ ನೀಡಿ ಸ್ಥೂಲವಾಗಿ ಪರಿಶೀಲಿಸಬೇಕು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿ ಹಾಗೂ ನಗರ ಪಟ್ಟಣ ಪಂಚಾಯ್ತಿಯ ಪ್ರತಿ ವಾರ್ಡ್ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ ವಿಪತ್ತು ನಿರ್ವಹಣೆ ಯೋಜನೆ ತಯಾರಿಸಬೇಕು ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಕೆತ್ತಿಕಲ್‍ನಲ್ಲಿ ಭೂಕುಸಿತ ತಡೆಯುವ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಈ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ಸಿಕ್ಕಿದ್ದು ಶೀಘ್ರವೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್ ಕೆ. ಮಾತನಾಡಿ, ಪ್ರಾಕೃತಿಕ ದುರಂತಗಳ ನಂತರ ಸಂತ್ರಸ್ತರನ್ನು ಸ್ಥಳಾಂತರಿಸುವ ಬದಲು, ರೆಡ್ ಅಲರ್ಟ್ ಸಮಯದಲ್ಲಿಯೇ ಸಂಭಾವ್ಯ ಅನಾಹುತಗಳ ಪ್ರದೇಶದಲ್ಲಿ ನಾಗರಿಕರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಅಂತಹ ಸ್ಥಳಗಳ ಮನೆಗಳಿಗೆ ನೋಟಿಸ್ ಕೊಡಬೇಕು ಎಂದು ತಿಳಿಸಿದರು.
ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಮತ್ತಿತರರು ಇದ್ದರು.